ಬೆಂಗಳೂರು, ಆ.25: ಮಂಕಿಪಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ಈ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ತಯಾರಿಕೆಯನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಪರೀಕ್ಷೆ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಇದು ಸೋಂಕು ರೋಗ ಆಗಿರುವುದರಿಂದ ರೋಗದ ಪರೀಕ್ಷೆಯೂ ಉಚಿತವಾಗಿದೆ. ಇಲ್ಲಿಯವರೆಗೆ ಒಂದು ಪ್ರಕರಣವೂ ವರದಿಯಾಗಿಲ್ಲ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.