ನವದೆಹಲಿ, ಸೆ.18: ಹರ್ಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಏಳು ಭರವಸೆಗಳನ್ನು ಈಡೇರಿಸಲಾಗುವುದು. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಪ್ರತಿ ಕುಟುಂಬಕ್ಕೆ 300 ಯೂನಿಟ್ ವಿದ್ಯುತ್ ನೀಡುವುದಾಗಿ ಅವರು ಘೋಷಿಸಿದರು. ಎರಡು ಲಕ್ಷ ನೇಮಕಾತಿಗಳನ್ನು ಮಾಡಲಾಗುವುದು ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು. ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಹರ್ಯಾಣದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ವಿಧವೆಯರು, ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ (ದಿವ್ಯಾಂಗರಿಗೆ) 500 ರೂಪಾಯಿಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು 6,000 ರೂಪಾಯಿ ಮಾಸಿಕ ಪಿಂಚಣಿ ನೀಡಲಿದೆ. ಹರ್ಯಾಣವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 25 ಲಕ್ಷ ರೂಪಾಯಿ ಉಚಿತ ಚಿಕಿತ್ಸೆ ಮತ್ತು ತ್ವರಿತ ಬೆಳೆ ಪರಿಹಾರವನ್ನು ಘೋಷಿಸಿದರು. ಬಡ ಕುಟುಂಬಗಳಿಗೆ 3.5 ಲಕ್ಷ ರೂಪಾಯಿ ವೆಚ್ಚದಲ್ಲಿ 100 ಗಜ ಮತ್ತು ಎರಡು ಕೋಣೆಗಳ ಮನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಜಾತಿ ಸಮೀಕ್ಷೆ ಮತ್ತು ಕೆನೆಪದರ ಮಿತಿಯನ್ನು 10 ಲಕ್ಷ ರೂಪಾಯಿಗಳಿಗೆ ಏರಿಸುವುದಾಗಿಯೂ ಖರ್ಗೆ ಘೋಷಿಸಿದರು.