ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮವು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು. ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಆಗ ಅದು ಅವರ ವ್ಯಕ್ತಿತ್ವದಲ್ಲಿ ರೂಢಿಗತವಾಗುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಲಾಯಿತು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ರೆಡ್‌ಕ್ರಾಸ್ ನಿಕಟ ಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ., ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್, ಖಜಾಂಚಿ ರಮಾದೇವಿ, ಲಯನ್ಸ್ ವಲಯಾಧ್ಯಕ್ಷ ಅನಂತ ಶೆಟ್ಟಿ, ರೇಖಾ ಎ. ಶೆಟ್ಟಿ, ನೋಡಲ್ ಅಧಿಕಾರಿ ಜಯಶ್ರೀ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.