Wednesday, December 4, 2024
Wednesday, December 4, 2024

ಜಾಗೃತಿ ವಹಿಸುವುದರಿಂದ ಮಾತ್ರ ಹೆಚ್.ಐ.ವಿ ಯಿಂದ ದೂರವಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಜಾಗೃತಿ ವಹಿಸುವುದರಿಂದ ಮಾತ್ರ ಹೆಚ್.ಐ.ವಿ ಯಿಂದ ದೂರವಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಡಿ.2: ಜನಸಾಮಾನ್ಯರು ಹೆಚ್.ಐ.ವಿ ರೋಗದ ಹರಡುವಿಕೆ, ಅದರಿಂದಾಗುವ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಅಗತ್ಯ ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಿದ್ದಲ್ಲಿ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಅಂಬಲಪಾಡಿ ಪ್ರಗತಿಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿದ್ಯಾರತ್ನ ಸ್ಕೂಲ್ ಕಾಲೇಜು ಆಫ್ ನರ್ಸಿಂಗ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿ ಸೌಧ ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಯುವಜನರು ಹೆಚ್ಚು ಈ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಯುವಜನರಲ್ಲಿ ಈ ರೋಗದ ಬಗ್ಗೆ ಅರಿವು ಮೂಡಿಸಬೇಕು. ಏಡ್ಸ್ ಒಂದು ಮಾರಕ ಕಾಯಿಲೆಯಾಗಿದ್ದು, ಇದು ಹರಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ತಮ್ಮದಲ್ಲದ ತಪ್ಪಿನಿಂದಾಗಿ ಹಲವರು ಏಡ್ಸ್ ರೋಗಕ್ಕೆ ತುತ್ತಾಗುತ್ತಾರೆ. ಅಸುರಕ್ಷಿತ ಲೈಂಗಿಕತೆ, ಸೋಂಕಿತರ ರಕ್ತವನ್ನು ಪರೀಕ್ಷೆ ಮಾಡದೇ ಪಡೆಯುವುದರಿಂದ, ಆಸ್ಪತ್ರೆಗಳಲ್ಲಿ ಸಂಸ್ಕರಣೆ ಮಾಡದ ಸಿರಿಂಜ್ ಬಳಕೆಯಿಂದ, ಸೋಂಕಿತ ತಾಯಿಯಿಂದ ಮಗುವಿನ ಗರ್ಭಾವಸ್ಥೆಯಲ್ಲಿ, ಹೆರಿಗೆ ಸಮಯದಲ್ಲಿ ಅಥವಾ ಎದೆ ಹಾಲಿನ ಮೂಲಕ ಈ ರೋಗ ಹರಡುತ್ತದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದ ಅವರು, ಹೆಚ್.ಐ.ವಿ ರೋಗಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಔಷದೋಪಚಾರಗಳನ್ನು ನೀಡಲಾಗುತ್ತಿದೆ ಎಂದರು. ಹೆಚ್.ವಿ.ಗೆ ರೋಗಕ್ಕೆ ತುತ್ತಾದವರಿಗೂ ಸಹ ಸಮಾಜದಲ್ಲಿ ಎಲ್ಲರಂತೆ ಬದುಕುವ ಹಕ್ಕಿದ್ದು, ಅವರುಗಳನ್ನು ದೂರವಿಡದೇ ಪ್ರೀತಿ, ವಿಶ್ವಾಸದಿಂದ ನೋಡಿಕೊಳ್ಳಬೇಕು ಎಂದ ಅವರು, ಯುವಜನತೆ ಏಡ್ಸ್ ರೋಗದ ಕುರಿತು ಅರಿವು ಹೊಂದುವುದರ ಜೊತೆಗೆ ಸಾರ್ವಜನಿಕರಿಗೆ ಏಡ್ಸ್ ರೋಗ ಹರಡುವ ಕುರಿತು ಹಾಗೂ ತಡೆಗಟ್ಟಲು ಇರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಅವರುಗಳಲ್ಲಿಯೂ ಸಹ ಜಾಗೃತಿ ಮೂಡಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್ ಯೋಗೇಶ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಆರೋಗ್ಯವನ್ನು ಕಾಯ್ದುಕೊಳ್ಳುವ ಹಕ್ಕಿದೆ. ಹೆಚ್.ಐ.ವಿ ಜೊತೆಗೆ ತಮ್ಮ ಬದುಕನ್ನು ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ನಿರ್ಲಕ್ಷ್ಯ ಮಾಡದೇ ಉದ್ಯೋಗ, ವಿದ್ಯಾಭ್ಯಾಸ ಹಾಗೂ ಇನ್ನೀತರ ಕ್ಷೇತ್ರದಲ್ಲಿ ಹಕ್ಕುಗಳನ್ನು ಸಮನಾಗಿ ನೀಡಿ, ಅವರಲ್ಲಿನ ಮನೋಸೈರ್ಯ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುವ ಕೆಲಸದಲ್ಲಿ ಪ್ರತಿಯೊಬ್ಬರು ಸಹಕಾರಿಯಾಗಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯ ತನ್ನ ದೈಹಿಕ ಹಾಗೂ ಮಾನಸಿಕ ಸ್ಥಿತಿಯನ್ನು ನಿಯಂತ್ರಣದಲ್ಲಿ ಇರಿಸಿಕೊಂಡಾಗ ಮಾತ್ರ ಹೆಚ್.ಐ.ವಿ ಏಡ್ಸ್ನಿಂದ ದೂರ ಉಳಿಯಲು ಸಾಧ್ಯ. ಏಡ್ಸ್ ಕಾಯಿಲೆಗೆ ಒಳಗಾದವರನ್ನು ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಬದುಕಲು ದಾರಿ ಮಾಡಿಕೊಡಬೇಕು. ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವರು ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು ಎಂದರು. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿ ಗಣನೀಯ ಸೇವೆ ಸಲ್ಲಿಸಿದ ಅನುರಾಧ ವಿ.ಎಸ್, ಜಯ ಸಾಲಿಯಾನ್, ನರಸಿಂಹಮೂರ್ತಿ ವೈ, ಶ್ರೀನಿವಾಸ ಶೆಟ್ಟಿಗಾರ್, ಚಂದ್ರಣ್ಣ, ಡಾ. ವ್ಯಾಸರಾಜ್ ತಂತ್ರಿ, ಡಾ.ವಿಮಲ ಚಂದ್ರಶೇಖರ್, ಶ್ರೀಲತಾ, ಡಾ. ನವನೀತ ಕೆ.ಪಿ ಹಾಗೂ ಎಝಿಲ್ ಮೆಲ್ವಿನ್ ಕ್ಯಾಸ್ತಲಿನೊ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಎಸ್.ಕೆ.ಆರ್.ಡಿ.ಪಿ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ವರ ಬಿ.ಎಂ ಸ್ವಾಗತಿಸಿ, ಮಂಜುನಾಥ ಗಾಣಿಗ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್‌ನಿಂದ ಕೆ.ಎಂ ಮಾರ್ಗವಾಗಿ ಅಂಬಲಪಾಡಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣದವರೆಗೆ ನಡೆದ ಏಡ್ಸ್ ಕುರಿತ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್ ಯೋಗೇಶ್ ಚಾಲನೆ ನೀಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ...

ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಉಡುಪಿ, ಡಿ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...
error: Content is protected !!