ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಅಂಕ ಗಳಿಸಿದ 1450 ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ವೆಚ್ಚದಲ್ಲಿ ಜನವರಿ 25 ಶನಿವಾರ ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಬ್ರಹ್ಮಾವರ ಭಾಗದ ವಿದ್ಯಾರ್ಥಿಗಳಿಗೆ ಶನಿವಾರ ಮಧ್ಯಾಹ್ನ 2.30ಕ್ಕೆ ಬ್ರಹ್ಮಾವರದ ಬಂಟರ ಭವನದ ಸಭಾಂಗಣ ಹಾಗೂ ಉಡುಪಿ ಭಾಗದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 4.00 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಶಾಸಕ ಯಶ್ಪಾಲ್ ಸುವರ್ಣ ತಮ್ಮ ತಂದೆ ತಾಯಿಯ ಸ್ಮರಣಾರ್ಥವಾಗಿ ಸ್ಥಾಪಿಸಿದ ಪುಷ್ಪಾನಂದ ಫೌಂಡೇಶನ್ ಮೂಲಕ ಕಳೆದ ಹಲವು ವರ್ಷಗಳಿಂದ ಪ್ರತಿಭಾ ಪುರಸ್ಕಾರ ವಿತರಣೆ, ಮಕ್ಕಳ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯಂದು ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪೆನ್ ವಿತರಣೆ, ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿನಿಗೆ ಮನೆ ನಿರ್ಮಾಣ, ಶಾಲಾರಂಭದ ದಿನದಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಣೆ ಸಹಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.