ಶಿರ್ವ: ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಪರಿಸರ ಕಾಳಜಿ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೊನೀಸ್ ಹೇಳಿದರು.
ಅವರು ಕಾಪು ಕಡಲ ತೀರದಲ್ಲಿ ಸ್ವಚ್ಛ ಭಾರತ-ಸ್ವಸ್ಥ ಭಾರತದ ನೆಲೆಯಲ್ಲಿ ಸ್ವಚ್ಛ- ಸುಂದರ ಸಾಗರ, 75 ನೇ ಸ್ವಾತಂತ್ರ್ಯದ ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ಕಾಲೇಜಿನ ಎನ್. ಸಿ.ಸಿ ಘಟಕ ಹಾಗೂ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಸಂಯುಕ್ತ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ದೇಶ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ. ಸ್ವಚ್ಛತೆಯ ಪರಿಕಲ್ಪನೆ ಸಾಕಾರಗೊಳಿಸಲು ಪ್ರಜ್ಞಾವಂತ ನಾಗರಿಕರು ಕ್ರಿಯಾಶೀಲ ಪಾತ್ರವನ್ನು ನಿರ್ವಹಿಸಬೇಕಾಗಿದೆ ಎಂದು ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ ಉಲ್ಲೇಖಿಸಿದರು. ಕಡಲ ತೀರದಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯಶೋಧ, ಸುರಕ್ಷಾ, ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತ, ಕಂಪನಿ ಸಾರ್ಜೆಂಟ್ ಕ್ವಾಟರ್ಮಸ್ಟರ್ ಮೋಹಿತ್ ಎನ್ ಸಾಲಿಯಾನ್, ಕಾರ್ಪೊರಲ್ ಧೀರಜ್ ಆಚಾರ್ಯ ಸಹಕರಿಸಿದರು. ಜೂನಿಯರ್ ಅಂಡರ್ ಆಫೀಸರ್ ಸುರಕ್ಷ ಸ್ವಾಗತಿಸಿ, ಲ್ಯಾನ್ಸ್ ಕಾರ್ಪೊರಲ್ ಲೋಬೋ ರಿಯಾ ನೆವಿಲ್ ಪಿಂಟೋ ವಂದಿಸಿದರು.