ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಗುರುವಾರ ಸಂಭ್ರಮಾಚರಣೆ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಘಟನಾ ಚತುರ ವಿ.ಸುನೀಲ್ ಕುಮಾರ್ ಇವರೀರ್ವರು ಸಚಿವರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಸಮಸ್ತ ಕಾರ್ಯಕರ್ತರಿಗೆ ಸಂದ ಗೌರವ. ಈ ಆಯ್ಕೆಗೆ ಸಹಕರಿಸಿದ ಎಲ್ಲ ಹಿರಿಯರೂ ಅಭಿನಂದನಾರ್ಹರು ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು ಮಾತನಾಡಿ, ವಹಿಸಿರುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸಿ ಅನುಭವವನ್ನು ಮೇಳೈಸಿರುವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಮೂರನೇ ಬಾರಿಗೆ ಹಾಗೂ ಸಂಘಟನೆ ಮೂಲಕ ಅಭಿವೃದ್ಧಿಯ ಹೊಸ ಶಕೆಗೆ ಮುನ್ನುಡಿ ಬರೆದು ಸರಕಾರದ ಮುಖ್ಯ ಸಚೇತಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು ಮೊದಲನೇ ಬಾರಿಗೆ ರಾಜ್ಯ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ. ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆಯಾಗಿ ಶೋಭಾ ಕರಂದ್ಲಾಜೆ ಆಯ್ಕೆ ಸಹಿತ ರಾಜ್ಯದಲ್ಲಿ ಈ ಬೆಳವಣಿಗೆ, ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ವಿಜಯ ಪತಾಕೆಯನ್ನು ಉತ್ತುಂಗಕ್ಕೇರಿಸಲು ನಾಂದಿ ಹಾಡಿದೆ ಎಂದರು.
ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುವರ್ದನ್ ನಾಯಕ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ಪ್ರಭು, ಜಿಲ್ಲಾ ಕಾರ್ಮಿಕ ಪ್ರಕೋಷ್ಠ ಸಂಚಾಲಕ ಶೈಲೇಂದ್ರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಭಾರತಿ ಚಂದ್ರಶೇಖರ್, ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಉಡುಪಿ ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸರೋಜಾ ಶೆಣೈ, ಪ್ರಧಾನ ಕಾರ್ಯದರ್ಶಿ ಸುಜಾಲಾ ಸತೀಶ್, ನಗರ ಯುವ ಮೋರ್ಚಾ ಉಪಾಧ್ಯಕ್ಷ ಪ್ರಜೀತ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸುಶಾಂತ್, ಪ್ರಮುಖರಾದ ಪ್ರದೀಪ್ ಶೆಟ್ಟಿ, ಆನಂದ್ ಸುವರ್ಣ, ಶಿವರಾಮ್ ಕಾಡಿಮಾರ್ ಮುಂತಾದವರು ಉಪಸ್ಥಿತರಿದ್ದರು.