ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಮುಖ್ಯಮಂತ್ರಿಗಳ ಸಭೆಗೆ ಜಿಲ್ಲೆಯ ಪ್ರಸಕ್ತ ಕೋವಿಡ್ ಪರಿಸ್ಥಿತಿಯ ಕುರಿತು ಸಮಗ್ರ ವರದಿಯನ್ನು ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಕುರಿತಂತೆ ವರದಿಯನ್ನು ಸಿದ್ದಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಮುಖ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.