ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯುತ್ತಿದ್ದು, ಸರ್ಕಾರದ ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಶುಕ್ರವಾರ ನಗರದ ಅಮ್ಮಣಿ ರಾಮಣ್ಣ ಹಾಲ್ ನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾಕರಣ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಮಾತನಾಡಿದರು.
ಕೋವಿಡ್ ನ ಅಪಾಯದಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರೀಕರೂ ತಪ್ಪದೇ ಲಸಿಕೆ ಪಡೆಯಬೇಕು ಎಂದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಈಗಾಗಲೇ 79% ಪ್ರಥಮ ಡೋಸ್ ಲಸಿಕೆ ನೀಡಲಾಗಿದೆ ಎಂದರು.
ಅಮ್ಮಣ್ಣಿ ರಾಮಣ್ಣ ಹಾಲ್ ನಲ್ಲಿನ ಲಸಿಕಾ ಕೇಂದ್ರದಲ್ಲಿ 500 ಮಂದಿ ಸಾರ್ವಜನಿಕರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿದ್ದು, ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿದ್ದು, ಸ್ಥಳೀಯ ನಗರಸಭಾ ಸದಸ್ಯರು ಸಹ ನಾಗರೀಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಕೋವಿಡ್ ಲಸಿಕಾ ನೋಡೆಲ್ ಅಧಿಕಾರಿ ಡಾ. ಎಂ.ಜಿ.ರಾಮ ಮತ್ತಿತರರು ಉಪಸ್ಥಿತರಿದ್ದರು.