ಉಡುಪಿ: ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಸ್ತೆಯಲ್ಲಿ ವಾಹನ ಚಾಲನಾ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಸುರಕ್ಷಿತವಾಗಿರಬಹುದು. ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳಿಂದ ಮುಕ್ತವಾಗಬಹುದು ಎಂದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳನ್ನ 2 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಸಂಚಾರಕ್ಕೆ ಸುರಕ್ಷಿತ ಸ್ಥಳಗಳನ್ನಾಗಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪೊಲೀಸ್ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಈ ಎಲ್ಲಾ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಪರಿಶೀಲಿಸಿ, ಅಲ್ಲಿನ ಸ್ಥಿತಿಗತಿ ಮತ್ತು ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ವಿವರವಾದ ವರದಿಯನ್ನು ನೀಡಬೇಕು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಸೂಚನಾ ಫಲಕಗಳು, ಎಚ್ಚರಿಕೆ ಫಲಕಗಳು ಸೇರಿದಂತೆ ವಾಹನಗಳ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿನ ಒಬ್ಬರು ಶಿಕ್ಷಕರಿಗೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ವತಿಯಿಂದ ಸೂಕ್ತ ತರಬೇತಿ ನೀಡಿ ಅವರ ಮೂಲಕ ಮಕ್ಕಳಿಗೆ ಅರಿವು ಮೂಡಿಸುವಂತೆ ಸೂಚಿಸಿದ ಅವರು, ಪ್ರಾಥಮಿಕ ಹಂತದಲ್ಲಿ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 10 ದಿನಗಳ ಒಳಗೆ ತರಬೇತಿ ಆಯೋಜಿಸಿ ಎಂದರು.
ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಎಲ್ಲಾ ಇಲಾಖೆಗಳು ರಸ್ತೆ ನಿರ್ಮಾಣದ ಸಂದರ್ಭದಲ್ಲಿಯೇ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ತಪ್ಪದೇ ಅಳವಡಿಸಬೇಕು ಎಂದರು.
ರಾ.ಹೆ ಕಾಮಗಾರಿ ಸಂದರ್ಭದಲ್ಲಿ ಕಾಮಗಾರಿ ಮುಕ್ತಾಯಗೊಂಡಿದ್ದರೂ ಸಹ ರಸ್ತೆ ಬದಿಯಲ್ಲಿ ರಸ್ತೆ ನಿರ್ಮಾಣ ಸಾಮಗ್ರಿಗಳನ್ನು ತೆರವುಗೊಳಿಸಿದೇ ಇರುವುದರಿಂದ ಹಲವು ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಅಂತಹ ಎಲ್ಲಾ ಸಾಮಗ್ರಿಗಳನ್ನು ತೆರವುಗೊಳಿಸುವಂತೆ ತಿಳಿಸಿದ ಎಸ್ಪಿ ವಿಷ್ಣುವರ್ಧನ್, ಜಿಲ್ಲೆಯಲ್ಲಿ ಜನವರಿ 2021 ರಿಂದ ಸೆಪ್ಟಂಬರ್ ವರೆಗೆ ಸಂಚಾರಿ ನಿಯಮ ಉಲ್ಲಂಘಿಸಿರುವ ಕುರಿತಂತೆ ಪೊಲೀಸ್ ಇಲಾಖೆವತಿಯಿಂದ 48000 ಪ್ರಕರಣಗಳನ್ನು ದಾಖಲಿಸಿ 2.26 ಕೋಟಿ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ರಸ್ತೆ ಸುರಕ್ಷತಾ ಸಭೆಗೆ ನೋಟೀಸ್ ನೀಡಿದ್ದರೂ ಸಹ ಆಗಮಿಸದ ರಾ.ಹೆ. 66 ರ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.