ಮಂಗಳೂರು: ಮೇರು ವ್ಯಕ್ತಿತ್ವದ ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ (80) ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಬ್ಲಾಸಂ ಫರ್ನಾಂಡಿಸ್, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಜುಲೈ 19ರಂದು ವ್ಯಾಯಾಮ ನಡೆಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದು ಬಿದ್ದ ಅವರಿಗೆ ತಲೆಯ ಒಳಭಾಗದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
27 ಮಾರ್ಚ್ 1941ರಂದು ಉಡುಪಿಯಲ್ಲಿ ಜನಿಸಿದ ಆಸ್ಕರ್ ಫರ್ನಾಂಡಿಸ್ 1980ರಲ್ಲಿ ಉಡುಪಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಬಳಿಕ 1984, 1989, 1991ಹಾಗೂ 1996 ರಲ್ಲಿ ಲೋಕಸಭೆಗೆ ಆಯ್ಕೆಯಾಗಿ ಕರಾವಳಿಯ ಪ್ರಭಾವಿ ಕಾಂಗ್ರೆಸ್ ನಾಯಕರಾಗಿ ಹೊರಹೊಮ್ಮಿದರು.
ಯುಪಿಎ ನೇತೃತ್ವದ ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್, ಕಾಂಗ್ರೆಸ್ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಕಾಂಗ್ರೆಸ್ ಪ್ರಭಾವಿ ನಾಯಕರಾಗಿದ್ದ ಆಸ್ಕರ್ ಫರ್ನಾಂಡಿಸ್ ತಮ್ಮ ಪಕ್ಷನಿಷ್ಠೆಯ ಮೂಲಕ ಪ್ರಖ್ಯಾತಿ ಪಡೆದರು.
ಗಣ್ಯರ ಸಂತಾಪ:
ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಕೆ. ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.