ಮಂಗಳೂರು: ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್‍ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭಯೋತ್ಪಾದನೆ ಚಟುವಟಿಕಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿದೆ. ಇದೊಂದು ಆತಂಕಕಾರಿ ಫಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಚೇರಿ (ಎನ್‌ಐಎ) ತೆರೆಯಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹ ಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಶಾಸಕರಿಗೆ ಭರವಸೆ ನೀಡಿದ್ದಾರೆ.