ಕೋಟ, ಫೆ.3: ಹೊಳಪು ಕಾರ್ಯಕ್ರಮದ ಮೂಲಕ ಪಕ್ಷಭೇದ ಮರೆತು ಎಲ್ಲರೂ ಒಟ್ಟಾಗಿ ಸಂಘಟಿಸಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಂಕಲ್ಪ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆಯಲು ಸಹಕಾರಿ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ಹೊಳಪು-2024 (ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಸ್ವಾಗತ ಗೋಪುರ ಹಾಗೂ ಟೀ ಶರ್ಟ್ ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಸಂಚಾಲಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಫೆಬ್ರ‍್ರವರಿ 10 ರಂದು ಕೋಟದ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಎಲ್ಲರ ಸಹಕಾರದ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕೋರಿದರು.
ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ್ ಬಾಬು, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಸ್ಥಳೀಯ ಪಂಚಾಯತ್ ಜನ ಪ್ರತಿನಿಧಿಗಳು, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು ಮತ್ತಿತ್ತರರು ಉಪಸ್ಥಿತರಿದ್ದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಕುಮಾರ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.