ಮಣಿಪಾಲ: ಮುನಿಯಾಲ್ ಆಯುರ್ವೇದ ಕಾಲೇಜು, ಉಡುಪಿ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೆಟ್ಟಿಬೆಟ್ಟು ಸಹಯೋಗದೊಂದಿಗೆ ಪೋಷಣ್ ಅಭಿಯಾನ ಪೋಷಣ್ ಮಾಸಾಚರಣೆ- ಸೆಪ್ಟಂಬರ್ 2021 ರ ಕಾರ್ಯಕ್ರಮ ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ ಇವರು ದೀಪ ಬೆಳಗಿಸಿ ಪೋಷಣ್ ಅಭಿಯಾನಕ್ಕೆ ಸಂಬಂಧಿತ ಭಿತ್ತಿಪತ್ರ ಗಳನ್ನು ಬಿಡುಗಡೆಗೊಳಿಸಿ, ಉತ್ತಮ
ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆಯ ಪ್ರಾಮುಖ್ಯತೆಯನ್ನು ತಿಳಿಸುವುದರೊಂದಿಗೆ ಕೌಟುಂಬಿಕ ದೌರ್ಜನ್ಯದಡಿ ಕಾನೂನು ಸೇವೆಗಳ ಮಹತ್ವದ ಕುರಿತು ಮಾಹಿತಿ ನೀಡಿ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಮುನಿಯಾಲು ಆಯುರ್ವೇದ ಆಸ್ಪತ್ರೆಯ ಡಾ.ನಿವೇದಿತಾ ಇವರು ಆರೋಗ್ಯ ವೃದ್ಧಿಗಾಗಿ ಸಾಂಪ್ರ್ರದಾಯಿಕ ಆಹಾರಗಳ ಬಗ್ಗೆ ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.
ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಾದ ಡಾ.ನರಸಿಂಹ ನಾಯಕ್ ಇವರು ಪೋಷಣ್ ಅಭಿಯಾನದಡಿ ನಡೆಯುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ಎಲ್ಲರೂ ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡುವುದರೊಂದಿಗೆ ಪ್ರಮುಖವಾಗಿ ಗರ್ಭಿಣಿ, ಬಾಣಂತಿಯರು ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಪೋಷಣ್ ಮಾಸಾಚರಣೆ ಜೊತೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಸೆಟ್ಟಿಬೆಟ್ಟು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀದೇವಿ ಅಮ್ರತ ಮಹೋತ್ಸವದ ಕುರಿತು ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪೋಷಣ್ ಅಭಿಯಾನ ಯೋಜನೆಯ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸ್ಥಳೀಯರು ಉಪಸ್ಥಿತರಿದ್ದರು. ಸೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷೀಶ ಸ್ವಾಗತಿಸಿ, ಮೇಲ್ವಿಚಾರಕಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.