ಉಡುಪಿ: ಜಿಲ್ಲೆಯಲ್ಲಿರುವ ವಸತಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ, ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿ ಶಾಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ, ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ವಸತಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಸರಕಾರವು ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಶೂ, ಪಠ್ಯಪುಸ್ತಕ, ನೋಟ್‌ಪುಸ್ತಕ ನೀಡುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವ ಮೂಲಕ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
6ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾರ್ಗದರ್ಶನವನ್ನು ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮಾಧ್ಯಮಗಳ ಮುಖಾಂತರ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ವ್ಯಾಪಕ ಪ್ರಚಾರವನ್ನು ಕೈಗೊಳ್ಳುವಂತೆ ಸೂಚಿಸಿದರು.
ಕಾರ್ಕಳ ತಾಲೂಕಿನ ಮಿಯಾರು, ಕಾಪು ತಾಲೂಕಿನ ಕಳತ್ತೂರು, ಉಡುಪಿ ತಾಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲೂಕಿನ ಆರೂರು, ಕುಂದಾಪುರ ತಾಲೂಕಿನ ಶಂಕರನಾರಾಯಣ, ಸಿದ್ದಾಪುರ, ಯಡ್ಯಾಡಿ-ಮತ್ಯಾಡಿ, ಬೈಂದೂರು ತಾಲೂಕಿನ ಹೆರಂಜಾಲು ವಸತಿ ಶಾಲೆಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾ ಪ್ರವೇಶ ಪರೀಕ್ಷಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅನಿತಾ ಮಡ್ಲೂರ್, ಬಿ.ಸಿ.ಎಂ ಜಿಲ್ಲಾ ಮಟ್ಟದ ಅಧಿಕಾರಿಗಳಾದ ದೇವೆಂದ್ರ ಬಿರಾದಾರ್, ಐ.ಟಿ.ಡಿ.ಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್, ಡಿ.ಡಿ.ಪಿ.ಐ ಎನ್.ಎಚ್ ನಾಗೂರ್, ಡಯಟ್ ಪ್ರಾಂಶುಪಾಲ ವೇದಮೂರ್ತಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ ಬಿ ಮತ್ತಿತರರು ಉಪಸ್ಥಿತರಿದ್ದರು.