ಮಂಗಳೂರು: ಮೀನುಗಾರರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಯಶ್ಪಾಲ್ ಸುವರ್ಣ ನೇತೃತ್ವದ ಮೀನು ಮಾರಾಟ ಫೆಡರೇಷನ್ ನೂತನ ಪ್ರಧಾನ ಕಚೇರಿಯ ಶಿಲಾನ್ಯಾಸ ಸಂದರ್ಭದಲ್ಲಿ ನೀಲಾವರ ಗೋಶಾಲೆಗೆ ಧನಸಹಾಯ ನೀಡುವ ಮೂಲಕ ಗೋರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಇದರ ನೂತನ ಪ್ರಧಾನ ಕಚೇರಿ ಸಂಕೀರ್ಣ ಮತ್ಸ್ಯ ಸಂಪದ ಶಿಲಾನ್ಯಾಸ ನೆರವೇರಿಸಿ ಅವರು ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಪೇಜಾವರ ಶ್ರೀಪಾದರ ನೀಲಾವರ ಗೋಶಾಲೆಯ ಶ್ರೀ ಗೋವರ್ಧನ ಗಿರಿ ಟ್ರಸ್ಟಿಗೆ ರೂ. 2.50 ಲಕ್ಷ ಮೊತ್ತದ ಚೆಕ್ ನ್ನು ನಾಡೋಜ ಡಾ. ಜಿ. ಶಂಕರ್ ರವರು ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.
ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.