ಮಂಗಳೂರು: ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ೨೦೨೧-೨೨ ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಗೌರವ ವಂದನೆ ಸ್ವೀಕರಿಸಿ, ತಮ್ಮ ಬಾಲ್ಯದ ಕ್ರೀಡಾ ದಿನಗಳನ್ನು ನೆನಪಿಸಿಕೊಳ್ಳುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾ ಮನೋಭಾವನೆಯನ್ನು ಬೆಳಸಿಕೊಳ್ಳಲು ಪ್ರೇರೇಪಿಸಿ, ವಿದ್ಯಾರ್ಥಿಗಳಿಗೆ ಶಿಸ್ತು ಬದ್ಧ ಜೀವನ ನಡೆಸಿ ಉತ್ತಮ ನಾಗರಿಕರಾಗಲು ಕರೆ ನೀಡಿದರು.
ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರವಿಕುಮಾರ ಎಂ ಪಿ, ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಜೆಫ್ರಿ ರಾಡ್ರಿಗಸ್ ಹಾಗೂ ಕಾಲೇಜಿನ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಬೆಳಗಿದರು.
ರಾಷ್ಟ್ರೀಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆ ಎಂಬುವುದು ಕೇವಲ ಆಟವಲ್ಲ, ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಕ್ರೀಡೆಯು ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಹಾಗೂ ಕ್ರೀಡಾ ಸ್ಪೂರ್ತಿಯಾಗಿ ಜೀವನದಲ್ಲಿ ಸೋಲು ಮತ್ತು ಗೆಲುವನ್ನು ಹೇಗೆ ಸಮಾನರಾಗಿ ಸ್ವೀಕರಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ, ಶಿಸ್ತು ಬಹುಮುಖ್ಯವೆಂದು ಮತ್ತು ಮುಂದಿನ ಯುವ ಪೀಳಿಗೆಗೆ ಮಾದರಿಯಾಗಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಪ್ರೊ. ದೇವಿಪ್ರಸಾದ್ ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೈಹಿಕ
ಶಿಕ್ಷಣ ನಿರ್ದೇಶಕರಾದ ಮಹಮ್ಮದ್ ರಫೀಕ್ ಕೆ ಇವರು ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿಯಾದ ಅರ್ಪಿತಾ ಅವರು ವಂದಿಸಿದರು. ಬಿ.ಎಸ್ಸಿ ವಿಭಾಗದ ವಿದ್ಯಾರ್ಥಿನಿಯಾದ ರಾಜಲಕ್ಷ್ಮೀ ನಿರೂಪಿಸಿದರು.