ಮಂಗಳೂರು, ಜು.29: ಕಾಲೇಜಿನಲ್ಲಿ ದೊರೆಯುವ ಎಲ್ಲಾ ಅವಕಾಶ ಹಾಗೂ ಅನುಭವಗಳನ್ನು ಬಳಸಿಕೊಂಡು ನಾವು ಬೆಳೆಯಬೇಕು. ನಮ್ಮ ಬೆಳವಣಿಗೆಗೆ ಕಾರಣರಾದ ಹೆತ್ತವರು, ಶಿಕ್ಷಕರಿಗೆ ಋಣಿಯಾಗಿರುವುದರ ಜೊತೆಗೆ ದೇಶಕ್ಕೂ ಕೃತಜ್ಞರಾಗಿರಬೇಕು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಡಾ. ಕವಿತಾ ಕೆ.ಆರ್. ಮಾತನಾಡಿ, ಮುಂದಿನ ಮೂರು ವರ್ಷದಲ್ಲಿ ನಿಮಗೆ ಕಾಲೇಜಿನಲ್ಲಿ ಕಲಿಕೆಗೆ ಸಾಕಷ್ಟು ಅವಕಾಶವಿದೆ. ಆ ಮೂಲಕ ಜ್ಞಾನ ಹಾಗೂ ಕೌಶಲ್ಯ ಗಳಿಸಿಕೊಂಡು ಭವಿಷ್ಯಕ್ಕೆ ಸನ್ನದ್ಧರಾಗಬೇಕು ಎಂದು ಹೇಳಿದರು. ಮಂಗಳೂರು ಬಂದರು ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಜ್ಮತ್ ಆಲಿ ಜಿ. ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸೈಬರ್ ಅಪರಾಧ ಮತ್ತು ಮಾದಕವಸ್ತು ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ವಹಿಸಿ, ಕಾಲೇಜಿನ ನೀತಿ-ನಿಯಮಗಳ ಬಗ್ಗೆ, ಶಿಸ್ತು ಪಾಲನೆಯ ಮಹತ್ವದ ಬಗ್ಗೆ ವಿವರಿಸಿದರು.
ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ- ಸಂಯೋಜಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೇದಿಕೆಗಳ ಸಂಯೋಜಕರು ಹಾಗೂ ಬೋಧಕರು ಉಪಸ್ಥಿತರಿದ್ದರು. ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು.




By
ForthFocus™