ಸುಳ್ಯ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬೆಳ್ಳಾರೆ ಚಿಕನ್ ಸೆಂಟರ್ ಮಾಲಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಪ್ರವೀಣ್ ತನ್ನ ಅಂಗಡಿಯಲ್ಲಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಪ್ರವೀಣ್ ಮೇಲೆ ಏಕಾಏಕಿ ತಲವಾರಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯದಲ್ಲಿ ಅವರು ಕೊನೆಯುಸಿರೆಳೆದರು.
ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಪ್ರವೀಣ್ ಅವರ ಹತ್ಯೆ ಯಾಕಾಗಿ ನಡೆಯಿತು ಎಂಬುದು ಇನ್ನೂ ನಿಗೂಢವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹತ್ಯೆ ಖಂಡಿಸಿದ ಸಿಎಂ:
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಟ್ವೀಟ್’ ಮಾಡಿದ್ದಾರೆ.