ಮಂಗಳೂರು: 1200 ಕೋಟಿ ವೆಚ್ಚದಲ್ಲಿ ಬೆಂಗಳೂರು-ಮಂಗಳೂರು ನಡುವಿನ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ.
ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಮಂಗಳೂರು ಹಾಗೂ ಬೆಂಗಳೂರು ನಡುವಿನ ವಾಣಿಜ್ಯ ಸಂಬಂಧ ಸುಲಲಿತವಾಗುವುದು ಮಾತ್ರವಲ್ಲದೆ ಮಳೆಗಾಲದ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಡಕಾಗುವ ಅತೀ ದೊಡ್ಡ ಸಮಸ್ಯೆ ಪರಿಹರಿಸಿದಂತಾಗುತ್ತದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಅರಣ್ಯ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ವಾಧೀನಪಡಿಸಿ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಯವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಈ ಕಾಮಗಾರಿ ಪೂರ್ಣಗೊಳ್ಳುವ ಮೂಲಕ ಬಹುಕಾಲದ ಬೇಡಿಕೆ ಈಡೇರಿಸಿದಂತಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಯೋಜನೆಗೆ ಅನುಮೋದನೆ ನೀಡುವಲ್ಲಿ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಧನ್ಯವಾದ ಅರ್ಪಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.