ಉಡುಪಿ: ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆದು, ಉತ್ತಮ ಮತ್ತು ಶ್ರೇಷ್ಠ ವಿಜ್ಞಾನಿಗಳು ಜಿಲ್ಲೆಯಿಂದ ಮೂಡಿಬರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಅವರು ಅಲೆವೂರಿನ ಪ್ರಗತಿನಗರದಲ್ಲಿ, ಜಿಲ್ಲಾಡಳಿತ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್), ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೂ ಈ ಬಗ್ಗೆ ಅರಿವು ಮೂಡಿಸುವಲ್ಲಿ ವಿಜ್ಞಾನ ಕೇಂದ್ರವು ಸಹಕಾರಿಯಾಗಲಿದ್ದು, ಅವರಲ್ಲಿ ಸಂಶೋಧನೆಗಳ ಬಗ್ಗೆ ಆಸಕ್ತಿ ಮೂಡಿಸುವುದರ ಮೂಲಕ ಉತ್ತಮ ವಿಜ್ಞಾನಿಗಳನ್ನಾಗಿ ರೂಪಿಸಲು ಸಾಧ್ಯವಾಗಲಿದೆ ಎಂದರು.
ಈಗಾಗಲೇ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ಗಳ ಮೂಲಕ ವೈಜ್ಞಾನಿಕ ಅರಿವು ಮೂಡಿಸುತ್ತಿದ್ದು, ವಿಜ್ಞಾನ ಕೇಂದ್ರದ ಮೂಲಕ ಇನ್ನೂ ಹೆಚ್ಚಿನ ಅರಿವು ಮೂಡಲಿದೆ. ಬೆಳಪು ನಲ್ಲಿ 70 ಕೋಟಿ ವೆಚ್ಚದ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟದ ಕಾಮಗಾರಿಯೂ ಶೇ.70 ರಷ್ಟು ಮುಕ್ತಾಯಗೊಂಡಿದ್ದು, ಕಾಮಗಾರಿಯು ಶೀಘ್ರದಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ವಿ.ಡಿ.ಮೊಗೇರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್, ಅಲೆವೂರು ಗ್ರಾಮ ಪಂಚಾಯತ್‌ನ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಸ್ವಾಗತಿಸಿ, ವಂದಿಸಿದರು.