Sunday, November 24, 2024
Sunday, November 24, 2024

ಹೆಣ್ಣು ಮಕ್ಕಳು ತಮಗಿರುವ ಕಾನೂನುಗಳ ಕುರಿತು ಅರಿವು ಹೊಂದಬೇಕು: ನ್ಯಾ. ಶಾಂತವೀರ ಶಿವಪ್ಪ

ಹೆಣ್ಣು ಮಕ್ಕಳು ತಮಗಿರುವ ಕಾನೂನುಗಳ ಕುರಿತು ಅರಿವು ಹೊಂದಬೇಕು: ನ್ಯಾ. ಶಾಂತವೀರ ಶಿವಪ್ಪ

Date:

ಉಡುಪಿ: ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ರೂಪಿಸಿ, ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊಂದಿಗೆ ಅವುಗಳ ಉಪಯುಕ್ತತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.

ಅವರು ಇಂದು ಕಲ್ಯಾಣಪುರ ಸಂತೆಕಟ್ಟೆಯ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ರೋಟರಿ, ಚೈಲ್ಡ್ ಲೈನ್ 1098 ಉಡುಪಿ ಮತ್ತು ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ಸಂತೆಕಟ್ಟೆ ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವಯುತವಾದ ಸ್ಥಾನವಿದೆ. ಇವುಗಳ ಜೊತೆಗೆ ಅವರ ರಕ್ಷಣೆಗೆ ಹುಟ್ಟಿನಿಂದ ಕೊನೆಯ ವರೆಗೆ ರಕ್ಷಿಸಲು ಅನೇಕ ಕಾನೂನುಗಳನ್ನು ಹೆಣ್ಣು ಮಕ್ಕಳಿಗಾಗಿಯೇ ತಂದಿದೆ. ಪ್ರಸವ ಪೂರ್ವದಲ್ಲಿ ಭ್ರೂಣ ಹತ್ಯೆ ತಡೆಯಲು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಸಹ ಸರಕಾರ ಜಾರಿಕೆ ತಂದಿರುವುದನ್ನು ನಾವು ಕಾಣುತ್ತಿದ್ದೇವೆ ಎಂದರು.

ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದ ಅವರು ವೀರರಾಣಿ ಕಿತ್ತೂರು ಚೆನ್ಮಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಮತ್ತಿತರ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ರೂಢಿಸಿಕೊಳ್ಳಬೇಕು ಎಂದರು.

ಪೊಲೀಸ್ ಅಧೀಕ್ಷಕರಾದ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾವಂತರಾಗುವುದರ ಜೊತೆಗೆ ವಿಶ್ವದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಿದ್ದಾರೆ.

ದುರ್ಬಲರೆನಿಸಿದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಶೇ. 90 ರಷ್ಟು ಈಗಾಗಲೇ ಕಡಿಮೆಯಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣು ಮಕ್ಕಳ ಮೇಲೆ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಈ ಬಗ್ಗೆ ಹೆಣ್ಣುಮಕ್ಕಳು ಹಾಗೂ ಪೋಷಕರು ಜಾಗೃತರಾಗಿರಬೇಕು ಎಂದರು.

ಹೆಣ್ಣುಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ನಾವು ಯಾರಿಗಿಂತ ಕಡಿಮೆ ಇಲ್ಲ ಎಂಬ ಬಗ್ಗೆ ಮನೋಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಯೊಂದಿಗೆ ನೆಟ್ ಬ್ಯಾಂಕಿನಲ್ಲಿ ಹಣವನ್ನು ಲಪಟಾಯಿಸುವುದು ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಹ್ಯಾಕ್ ಮಾಡುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಮೂಢನಂಬಿಕೆಗಳಿಂದ ದೂರವಿರಬೇಕು. ಇತ್ತೀಚಿನ ದಿನಗಳಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ ಹೆಣ್ಣುಮಕ್ಕಳ ಕಲ್ಯಾಣಾಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳು ಜಾರಿಗೆ ತಂದಿದ್ದು, ಇದು ಸಮಾಜದ ಕಟ್ಟ ಕಡೆಯ ಹೆಣ್ಣು ಮಕ್ಕಳಿಗೂ ದೊರೆಯುವಂತಾಗಬೇಕು. ಹೆಣ್ಣುಮಕ್ಕಳಾದ ನಾವುಗಳು ನಮ್ಮ ಕಾರ್ಯಕ್ಷಮತೆಯನ್ನು ದಕ್ಷ ಹಾಗೂ ಯಾರಿಗಿಂತ ಕಡಿಮೆಯಿಲ್ಲ ಎಂಬ ರೀತಿಯಲ್ಲಿ ಎಲ್ಲಾ ಕ್ಷೇತ್ರದಲ್ಲಿಯೂ ಮಾಡಿ ತೋರಿಸಬೇಕು ಎಂದರು.

12 ನೇ ಶತಮಾನದ ವಚನ ಸಾಹಿತಿಗಳಾದ ಅಕ್ಕಮಹಾದೇವಿಯವರು ಸಾಮಾಜಿಕ ಕಟ್ಟುಪಾಡುಗಳನ್ನು ತ್ಯಜಿಸಿ, ಸಮಾಜ ಸುಧಾರಣೆಗಾಗಿ ಕೆಲಸ ಮಾಡಿರುವುದನ್ನು ನಾವು ಚರಿತ್ರೆಯಲ್ಲಿ ಓದಿದ್ದೇವೆ ಎಂದ ಅವರು, ಪ್ರಾಚೀನ ಕಾಲದಿಂದಲೂ ಸಹ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯತ್ತಲೇ ಬಂದಿವೆ. ಇವುಗಳನ್ನು ಕೊನೆಗಾಣಿಸಲು ಹೆಣ್ಣುಮಕ್ಕಳಾದ ನಾವುಗಳೇ ಮುಂದಾಗಬೇಕು ಎಂದರು. ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ರಸೂತಿ ತಜ್ಞರಾದ ಡಾ. ಪ್ರತಾಪ್ ಕುಮಾರ್ ರವರು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಬಗ್ಗೆ ಹಾಗೂ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿನಿ ಆರ್ಯ ಪ್ರಸೀದ ಅವರು ಹದಿಹರೆಯದ ಹೆಣ್ಣುಮಕ್ಕಳಲ್ಲಿ ನಾಯಕತ್ವವನ್ನು ಬೆಂಬಲಿಸುವಲ್ಲಿ ಸಮಾಜದ ಪಾತ್ರ ಕುರಿತು ಉಪನ್ಯಾಸ ನೀಡಿದರು. ಧನ್ವಂತರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಮಹಿಳಾ ಸಬಲೀಕರಣ ಕುರಿತು ನಾಟಕ ಪ್ರದರ್ಶಿಸಿದರು. ಅನಾಥ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ಅನ್ನು ವಿತರಿಸಲಾಯಿತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್‌ನ ಅಧ್ಯಕ್ಷ ಡಾ. ಉಮೇಶ್ ಪ್ರಭು, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿ, ಚೈಲ್ಡ್ ಲೈನ್ ಸಹ ನಿರ್ದೇಶಕ ಗುರುರಾಜ್ ಭಟ್ ವಂದಿಸಿದರು. ಚೈಲ್ಡ್ ಲೈನ್ ಸಂಯೋಜಕಿ ಜ್ಯೋತಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!