ಉಡುಪಿ: ತೀವ್ರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2011 ಫೆಬ್ರವರಿ 8 ರಂದು ರಾತ್ರಿ 11 ಗಂಟೆ ಸುಮಾರಿಗೆ ಉಡುಪಿ ತಾಲೂಕು ಚಾಂತಾರು ಗ್ರಾಮದ ಗೋಳಿಕಟ್ಟೆ ನಿವಾಸಿಗಳಾದ ಸೋಮನಾಥ ನಾಯ್ರಿ ಹಾಗೂ ಶ್ರೀನಿವಾಸ ನಾಯ್ರಿ ಎಂಬವರು ವಾರಂಬಳ್ಳಿ ಗ್ರಾಮದ ಮೂಡುಬಿರ್ತಿಯ ವಾಸಿ ಹೇಮಾ ನಾಯ್ರಿ ಅವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಹಾರೆ ಹಾಗೂ ಸುತ್ತಿಗೆಯಿಂದ ತೀವ್ರ ತರಹದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಹಿನ್ನೆಲೆ, ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ರವರು ಆರೋಪಿಗಳಾದ ಸೋಮನಾಥ ನಾಯ್ರಿ ಹಾಗೂ ಶ್ರೀನಿವಾಸ ನಾಯ್ರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 11,000 ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ.
ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ.