ಉಡುಪಿ: ಮಾಜಿ ಪ್ರಧಾನಿ ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಶನಿವಾರ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ ‘ಅಟಲ್ ಟ್ರೋಫಿ – 2022’ ಉದ್ಘಾಟನಾ ಸಮಾರಂಭ ನಡೆಯಿತು.
ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರಗಳು ಮತ್ತು ಕೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಉಡುಪಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ 1999 ರಿಂದ ಸತತ 23 ವರ್ಷಗಳ ಕಾಲ ಕ್ರೀಡೆಯನ್ನು ಆಯೋಜಿಸುತ್ತಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವ ಶಾಸಕ ರಘುಪತಿ ಭಟ್ ಮತ್ತು ತಂಡದ ಕಾರ್ಯ ಶ್ಲಾಘನೀಯ.
ಎಲ್ಲಾ ಲೋಕಸಭಾ, ರಾಜ್ಯಸಭಾ, ವಿಧಾನಸಭಾ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇಂತಹ ಕ್ರೀಡಾಕೂಟವನ್ನು ಆಯೋಜಿಸಿದರೆ ದೇಶದಲ್ಲಿ ಕ್ರೀಡಾ ಕ್ರಾಂತಿಯಾಗುವುದು. ಅಟಲ್ ಬಿಹಾರಿ ವಾಜಪೇಯಿ ಮುತ್ಸದಿ ರಾಜಕಾರಣಿ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ಅನಾವರಣಗೊಳಿಸಿದ ಧೀಮಂತ ನಾಯಕ.
ಖೇಲೋ ಇಂಡಿಯಾ ಅಭಿಯಾನದ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡುವ ಕಾರ್ಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಆಗುತ್ತಿದೆ. ಕ್ರೀಡಾ ಕ್ಷೇತ್ರಕ್ಕೆ ಹೊಸ ಪ್ರತಿಭೆಗಳನ್ನು ಪರಿಚಯಿಸುವ ವೇದಿಕೆಯಾಗಿದೆ ಖೇಲೋ ಇಂಡಿಯಾ ಮೂಡಿಬಂದಿದೆ. ಕ್ರಿಕೆಟ್ ನ ಜನಪ್ರಿಯತೆಗೆ ತೀವ್ರ ಪೈಪೋಟಿ ನೀಡುತ್ತಿರುವ ಕಬಡ್ಡಿಗೆ ಪ್ರೊ ಕಬಡ್ಡಿ ಹೊಸ ದಿಕ್ಕನ್ನು ನೀಡಿದೆ ಎಂದರು.
ರಾಜ್ಯ ಸರ್ಕಾರದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ, ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಕಾರ್ಯಕ್ರಮದ ಸಂಚಾಲಕರಾದ ರಾಘವೇಂದ್ರ ಕಿಣಿ, ಗಿರೀಶ್ ಅಂಚನ್, ಉಮೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.