ಕುಂದಾಪುರ: ವಿದ್ಯಾರ್ಥಿಗಳು ಪ್ರತಿಯೊಂದು ಕ್ಷಣದಲ್ಲಿಯೂ ಕೂಡ ತಮ್ಮ ಉನ್ನತ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಆ ಮೂಲಕ ಇಂದಲ್ಲ ನಾಳೆ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಎಂದು ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಹೇಳಿದರು. ಅವರು ಇಲ್ಲಿನ ಸರಸ್ವತಿ ವಿದ್ಯಾಲಯ ಕ್ರೀಡಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಸದಸ್ಯ ರಾಮನಾಥ ನಾಯಕ್ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿನಿ ಅಮೀಕ್ಷಾ ಡಿ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರಾದ ನಾರಾಯಣ ಶೆಟ್ಟಿ, ಸೂರಜ್, ಲಾವಣ್ಯ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಮತ್ತು ಶಿಕ್ಷಕಿ ಶಾಂತಿ ಡಿಕೋಸ್ಟ ಉಪಸ್ಥಿತರಿದ್ದರು.
ಮಹಿಮಾ ಮತ್ತು ಕಿಶನ್ ಕ್ರೀಡಾ ಜ್ಯೋತಿ ಸಂಚಲನದ ನೇತೃತ್ವ ವಹಿಸಿದ್ದರು. ಆಂಗ್ಲ ಭಾಷೆಯ ಉಪನ್ಯಾಸಕರಾದ ಥಾಮಸ್ ಪಿ.ಎ ಸ್ವಾಗತಿಸಿ, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರಣಿಕ್ ವಂದಿಸಿದರು. ಕನ್ನಡ ಉಪನ್ಯಾಸಕ ಸುಜಯಿಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು.