ಉಡುಪಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿನ ಪೋಷಕರಿಗೆ ಮನ ಮುಟ್ಟುವಂತೆ ಬೀದಿ ನಾಟಕಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಆಟೋ ಪ್ರಚಾರದ ಮೂಲಕ ಹಾಗೂ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಈ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕು.
ಜಿಲ್ಲೆಯಾದ್ಯಂತ 10 ದಿನ ನಡೆಸಲಾಗುವ ಈ ಆಟೋ ಪ್ರಚಾರ ಕಾರ್ಯಕ್ರಮವು ಸಾಧ್ಯವಾದಷ್ಟು ಎಲ್ಲಾ ಕಾಲೋನಿಗಳಿಗೆ ತಲುಪುವಂತೆ ಯೋಜನೆ ರೂಪಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ಶೇಷಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆ ಅಧ್ಯಕ್ಷೆ ಆರ್.ಸುಮಿತ್ರ ನಾಯಕ್, ನಗರಸಭೆ ಸದಸ್ಯೆ ಎನ್.ವಿಜಯಲಕ್ಷ್ಮೀ, ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತಾ ಹಾಗೂ ಮಕ್ಕಳಾ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಸ್ವಾಗತಿಸಿದರು.