ಉಡುಪಿ, ಜ. 31: ನಾವು ಹಿಂದುಳಿದಿದ್ದೇವೆ ಎಂಬ ಮನಃಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಅವರು ಮಂಗಳವಾರ ನಗರದ ಅಂಬಲಪಾಡಿಯ ಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಇವರ ಸಹಯೋಗದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸವಿತಾ ಸಮುದಾಯಕ್ಕೆ ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
ಉಡುಪಿ ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸವಿತಾ ಮಹರ್ಷಿಗಳ ಬಗ್ಗೆ ಉಪನ್ಯಾಸ ನೀಡಿದರು.
ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುಭಾಸ್ ಭಂಡಾರಿ ಗುಜ್ಜಾಡಿ, ಕಾರ್ಕಳ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ನಾಗೇಶ್ ಭಂಡಾರಿ ಬಜೆಗೋಳಿ, ಬ್ರಹ್ಮಾವರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಶಿವರಾಮ್ ಭಂಡಾರಿ ಹಂದಾಡಿ, ಹೆಬ್ರಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ಭಂಡಾರಿ ಹೆಬ್ರಿ, ಕಾಪು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಿನಯ್ ಭಂಡಾರಿ ಪಡುಬಿದ್ರೆ, ಸವಿತಾ ಸಮಾಜ ಸೌಹಾರ್ದ ಸಹಕಾರಿಯ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ವಂದಿಸಿದರು. ಮಂಜುನಾಥ್ ಭಂಡಾರಿ ನಿರೂಪಿಸಿದರು.