ಕಾರ್ಕಳ, ಫೆ. 11: ವಿದ್ಯಾರ್ಥಿ ಜೀವನ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಂಡು ವಿದ್ಯಾವಂತ ಮತ್ತು ಸಂಸ್ಕಾರವಂತರಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.
ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ” ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಂಚಾಲಕರಾದ ಕೆ.ಪಿ.ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳಾಗುವಂತೆ ಕರೆ ನೀಡಿದರು. ಹಿರ್ಗಾನ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಿಲ್ಲವ ಯುವ ಬ್ರಿಗೇಡ್ ನ ಅಧ್ಯಕ್ಷ ಭರತ್ ಅಂಚನ್, ರಂಗ ನಿರ್ದೇಶಕ ಡಾ. ಜೀವನರಾಮ್ ಸುಳ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸೌಮ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.. ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್., ಆದರ್ಶ ಎಂ ಕೆ., ಉಪನ್ಯಾಸಕ ವೃಂದದವರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.