ಉಡುಪಿ, ಏ. 5: ಡಾ.ಬಾಬು ಜಗಜೀವನ್ ರಾಂ ಅವರ ಪ್ರೇರಣೆಯನ್ನು ಆಧಾರವಾಗಿಟ್ಟುಕೊಂಡು ಆಡಳಿತದಲ್ಲಿ ಸೇವೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಬು ಜಗಜೀವನ್ ರಾಂ ಅವರು ಬಾಬುಜೀ ಎಂಬ ನಾಮಧೇಯದಿಂದ ಖ್ಯಾತರು. ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಬಾಬುಜೀಯವರು ರಕ್ಷಣಾ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವುದರೊಂದಿಗೆ ವಿಜಯ ಸಾಧಿಸುವ ಜೊತೆಗೆ, ದೇಶಕ್ಕೆ ರಕ್ಷಣೆ ಒದಗಿಸಿದ್ದರು. ಹಸಿರು ಕ್ರಾಂತಿಗೆ ತಮ್ಮದೇ ಆದ ಪ್ರಾಮುಖ್ಯತೆ ನೀಡಿದವರು. ಹಸಿರು ಕ್ರಾಂತಿಯ ಹರಿಕಾರ ಎಂದೇ ಬಾಬುಜೀಯವರನ್ನು ಕರೆಯಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಶ್ರೀದೇವಿ ನಿರೂಪಿಸಿ, ವಂದಿಸಿದರು.