ಉಡುಪಿ, ಏ. 19: ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಪರಿಸ್ಧಿತಿ, ಪರೀಕ್ಷೆಯ, ಸಮುಚ್ಛಿತ ನಡವಳಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಿರುವ ಒಳರೋಗಿಗಳ ಗಂಟಲು ದ್ರವದ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದ ಅವರು, SARI, ILI Co-morbid ಪ್ರಕರಣಗಳಿಗೂ ಕೋವಿಡ್-19 ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಿದರು. ಚುನಾವಣೆ ಸಮೀಪಿಸುತ್ತಿರುವುದರಿಂದ ಸಭೆಗಳಲ್ಲಿ, ಜನದಟ್ಟಣೆ ಇರುವಲ್ಲಿ ಹಾಗೂ ಚುನಾವಣಾ ಸಿಬ್ಬಂದಿಗಳ ತರಬೇತಿ ಮುಂತಾದ ಕಡೆಗಳಲ್ಲಿ ಅಗತ್ಯ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಬೇಸಿಗೆ ಹಾಗೂ ಮುಂಬರುವ ಮಳೆಗಾಲದಲ್ಲಿ ಬರುವ ಇತರೇ ಸಾಂಕ್ರಾಮಿಕ ರೋಗಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಐ.ಎಂ.ಎ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.