ಉಡುಪಿ, ಜುಲೈ 1: ಭಾರತ ದೇಶ ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದು, ಇನ್ನೂ ಬಡತನದ ಅಂಚಿನಲ್ಲಿ ಇರುವುದಕ್ಕೆ ಮೂಲ ಕಾರಣ ನಿರೀಕ್ಷೆಗೂ ಮೀರಿ ಹೆಚ್ಚುತ್ತಿರುವ ಜನಸಂಖ್ಯೆ. ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.
ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಅಜ್ಞಾನ, ಮೂಢನಂಬಿಕೆ ಹಾಗೂ ಮುಂತಾದವುಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಜನಸಂಖ್ಯಾ ಸ್ಪೋಟದಿಂದ ಆಹಾರ, ನೀರು, ವಸತಿ, ಬಟ್ಟೆ, ನೆಲ, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳ ಕೊರತೆ, ಸಾಮಾಜಿಕ ಅಸಮಾನತೆ, ಅಪೌಷ್ಠಿಕತೆ, ನಗರ ವ್ಯಾಪ್ತಿಯಲ್ಲಿ ಕೊಳಚೆ ಪ್ರದೇಶಗಳ ಉಲ್ಬಣ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತದೆ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದರು.
ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಎರಡು ವಿಧಗಳಾಗಿ ವಿಂಗಡಿಸಲಾಗಿದ್ದು, ಜೂನ್ 27 ರಿಂದ ಜುಲೈ 10 ರವರೆಗೆ ಸಮುದಾಯದ ಜಾಗತೀಕರಣ ಪಾಕ್ಷಿಕ ಹಾಗೂ ಜುಲೈ 11 ರಿಂದ ಜುಲೈ 24 ರವರೆಗೆ ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ ಆಚರಿಸಲಾಗುವುದು. ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆಂಬ ಪ್ರತಿಜ್ಞೆ ಮಾಡಿಕೊಳ್ಳುತ್ತೇವೆ ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ ರಾಮ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಿದಾನಂದ ಸಂಜು, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಮತ್ತು ಡಾ. ಶೋಭಾ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು, ವೈದ್ಯಕೇತರ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಭಾರ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲತಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.