ಉಡುಪಿ, ಜುಲೈ 11: ದೇಶದಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವುಗಳು ಕಾರಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಮಂಗಳವಾರ ನಗರದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರಿಂದ ಜನಸಂಖ್ಯಾ ಹೆಚ್ಚಳವನ್ನು ತಡೆಗಟ್ಟಬಹುದಾಗಿದ್ದು, ಕುಟುಂಬ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದೂ ಕೂಡಾ ಅಗತ್ಯವಾಗಿದೆ. ಪ್ರಸ್ತುತ ಮುಂದುವರಿದ ದೇಶಗಳಲ್ಲಿ ಜನಸಂಖ್ಯೆ ಹೆಚ್ಚಳವು ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ಹಲವು ಆರ್ಥಿಕ, ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುಟುಂಬದ ನಿರ್ವಹಣೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಜನಸಂಖ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಅಜ್ಞಾನ, ಮುಂತಾದವುಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದ್ದು, ಜನಸಂಖ್ಯಾ ಹೆಚ್ಚಳವು ನೇರವಾಗಿ ಪ್ರಕೃತಿ ಮೇಲೆ ಪರಿಣಾಮ ಬೀರಲಿದ್ದು, ಪ್ರಕೃತಿಯಲ್ಲಿ ಅಸಮತೋಲನ ಕಾಣುವಂತಹ ಸಾಧ್ಯತೆಯಿದೆ ಎಂದರು. ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್ ಕೆ., ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಅಂಜಲಿ ವಾಗ್ಲೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್., ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಘುನಾಥ ಕೆ.ಎಸ್., ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಹಿರಿಯ ತಾಲೂಕು ಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವಪ್ಪ ಪಟಗಾರ್ ನಿರೂಪಿಸಿ, ಕಾಲೇಜಿನ ಉಪನ್ಯಾಸಕ ಡಾ.ನವೀನ್ ವಂದಿಸಿದರು.