ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯ ಮೊದಲ ಮತ್ತು ಪ್ರಮುಖ ಹೆಜ್ಜೆ ಮತದಾನ. ಆದ್ದರಿಂದ ಪ್ರತಿಯೊಬ್ಬ ಮತದಾರರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಜೊತೆಗೆ ಅದನ್ನು ಯಾವುದೇ ಆಸೆ, ಅಮಿಷಗಳಿಗೆ ಒಳಗಾಗದೇ ಮತ ಚಲಾಯಿಸುವ ಭಾದ್ಯತೆಯನ್ನೂ ಸಹ ನಿಭಾಯಿಸಬೇಕು. ಇದರಿಂದ ಉತ್ತಮ ಸದೃಢ ಸರಕಾರ ರಚನೆ ಸಾಧ್ಯವಾಗುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗಲಿದೆ ಎಂದರು.
ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಯುವ ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ, ನಿರ್ಭಿತಿಯಿಂದ ಮತ ಚಲಾಯಿಸುವ ಮೂಲಕ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ವ್ಯಕ್ತಿಯನ್ನು ಅಯ್ಕೆ ಮಾಡಿಕೊಳ್ಳಬೇಕು.
18 ವರ್ಷ ಮೀರಿದ ತಮ್ಮ ಎಲ್ಲಾ ಸ್ನೇಹಿತರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿಯ ಕುರಿತು ಸಂದೇಹಗಳಿಗೆ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1950 ಸಂಪರ್ಕಿಸುವಂತೆ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕು. ಮತದಾನವು ಸಂವಿಧಾನ ನೀಡಿರುವ ಮೂಲಭೂತ ಹಕ್ಕು ಆಗಿದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ, ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದರ ಮೂಲಕ ದೇಶದ ಪ್ರಗತಿಗೆ ಕಾರಣರಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ನವೀನ್ ಭಟ್ ಮಾತನಾಡಿ, ಮಾದರಿ ಆಡಳಿತ ವ್ಯವಸ್ಥೆಗೆ, ಉತ್ತಮ ಚುನಾಯಿತ ಸರಕಾರ ರಚನೆ ಅಗತ್ಯವಿದ್ದು, ಇದಕ್ಕಾಗಿ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಚಲಾಯಿಸುವುದು ಅಗತ್ಯವಾಗಿದೆ. ಚುನಾವಣೆಯಲ್ಲಿ ಪ್ರತೀ ಮತವೂ ನಿರ್ಣಾಯಕವಾಗಿದ್ದು, ಮತದಾರರು ತನ್ನ ಒಂದು ಮತದಿಂದ ಏನಾಗುತ್ತದೆ ಎಂಬ ಉದಾಸೀನ ತೋರದೇ, ಯಾವುದೇ ಮತ, ಧರ್ಮ, ಜನಾಂಗ, ಭಾಷೆ ಅಥವಾ ಪ್ರೇರೇಪಣೆಗಳಿಂದ ಪ್ರಭಾವಿತರಾಗದೇ ಮತದಾನ ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ಮತದಾನ ಹಕ್ಕನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸರಕಾರ ರಚನೆಗೆ ಎಲ್ಲರೂ ಕೈ ಜೋಡಿಸಬೇಕು. ಮತದಾನ ಮಾಡಲು ಅನುಕೂಲವಾಗಲೆಂದು ಮತದಾನ ದಿನದಂದು ನೀಡುವ ರಜೆಯನ್ನು ದುರುಪಯೋಗಪಡಿಸಿಕೊಳ್ಳದೇ ಎಲ್ಲರೂ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ಎಪಿಕ್ ಕಾರ್ಡ್ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತರಿದ್ದರು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಎಪಿಕ್ ಕಾರ್ಡ್ಗಳನ್ನು ವಿತರಿಸಲಾಯಿತು. ಮತದಾರರ ದಿನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆ, ಪೋಸ್ಟರ್ ರಚನೆ ಮತ್ತು ಕ್ವಿಜ್ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ವಂದಿಸಿದರು. ಡಯಟ್‌ನ ಅಶೋಕ್ ಕಾಮತ್ ನಿರೂಪಿಸಿದರು.