ಉಡುಪಿ, ಸೆ. 17: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ನಗರದ ವಿವಿಧ ರುದ್ರಭೂಮಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಕರಿಗೆ ಶಾಸಕ ಯಶ್ಪಾಲ್ ಸುವರ್ಣ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರುವನ್ನಾಗಿಸಲು ಪಣತೊಟ್ಟು ಹಗಲಿರುಳು ಶ್ರಮಿಸುತ್ತಾ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ನರೇಂದ್ರ ಮೋದಿಯವರ ಕಾರ್ಯವೈಖರಿ ಸರ್ವರಿಗೂ ಆದರ್ಶವಾಗಿದ್ದು, ಮೋದೀಜಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ರುದ್ರಭೂಮಿಗಳಲ್ಲಿ ಸ್ವಾರ್ಥ ರಹಿತವಾಗಿ ಸೇವೆ ಸಲ್ಲಿಸುತ್ತಿರುವ ಸೇವಕರಿಗೆ ಗೌರವಿಸಲಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು ಹಾಗೂ ನಗರಸಭೆ ಮಾಜಿ ಆಧ್ಯಕ್ಷರಾದ ಕಿರಣ್ ಕುಮಾರ್, ನಗರಸಭೆ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.