ಉಡುಪಿ, ಮಾ.26: ಲೋಕಸಭಾ ಚುನಾವಣೆ 2024 ರ ಚುನಾವಣೆಯು ಏಪ್ರಿಲ್ 26 ರಂದು ನಡೆಯಲಿದ್ದು, ಪ್ರತಿಯೊಬ್ಬ ಮತದಾರರು ಅಂದು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಮತದಾನ ಮಾಡುವ ಮೂಲಕ ತಮ್ಮ ನಾಯಕನನ್ನು ಚುನಾಯಿಸಲು ಹಕ್ಕು ನೀಡಿದೆ. ಇದನ್ನು ತಪ್ಪದೇ ಚಲಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಹಬ್ಬದ ರೀತಿಯಲ್ಲಿ ಇರುತ್ತದೆ. ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಏಕೆ ಮಾಡಬೇಕೆಂಬುದರ ಪ್ರಾಮುಖ್ಯತೆಯನ್ನು ತಿಳಿದು ಕಡ್ಡಾಯವಾಗಿ ಮತ ಹಾಕುವುದರ ಮೂಲಕ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯುವಜನರು ಸೇರಿದಂತೆ ಪ್ರತಿಯೊಬ್ಬ ಮತದಾರರಿಗೆ ಚುನಾವಣಾ ಸಾಕ್ಷರತೆ ಮೂಡಿಸಬೇಕು. ಯಾವುದೇ ಮತದಾರರು ಆಸೆ, ಆಮೀಷಗಳಿಗೆ ಒಳಗಾಗದೇ ಸ್ವಯಂ ನಿರ್ಣಯ ಕೈಗೊಂಡು ಅತ್ಯುತ್ತಮ ನಾಯಕರುಗಳನ್ನು ಆಯ್ಕೆ ಮಾಡಲು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು. ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಇಲಾಖೆಗಳ ವತಿಯಿಂದ ವಿಭಿನ್ನ ರೀತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಬೇಕು. ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಪ್ರವಾಸಿ, ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಮತದಾನದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಪಿಕ್ ಕಾರ್ಡ್ ಹೊಂದಿರುವ ಎಲ್ಲಾ ಯುವ ಜನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಯುವ ಜನತೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದರು. ಜಿಲ್ಲೆಯಲ್ಲಿ ಕಳೆದ ಬಾರಿ ಶೇಕಡವಾರು ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಕಡಿಮೆ ಮತದಾನ ಆಗಿರುವ ಕಾರಣ ಗುರುತಿಸುವುದರೊಂದಿಗೆ, ಮತದಾನ ಪ್ರಮಾಣ ಹೆಚ್ಚಿಸಲು ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಮತದಾನ ಅರಿವು ಶಿಕ್ಷಣದ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಮತ ಚಲಾಯಿಸುವವರ ಸಂಖ್ಯೆ
ಹೆಚ್ಚಿಸಲು ಕ್ರಮ ವಹಿಸಬೇಕು ಎಂದರು. ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ಬಾರಿ 85 ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಹೋಮ್ ವೋಟಿಂಗ್‌ಗಿಂತ ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ಹಿರಿಯ ನಾಗರಿಕರಿಗೆ ಪ್ರೇರಣೆ ನೀಡಬೇಕು. ತೀರಾ ಅಶಕ್ತರು ಹಾಗೂ ಹಾಸಿಗೆ ಹಿಡಿದವರು ಮಾತ್ರ ವಾಸ್ತವ್ಯ ಸ್ಥಳದಲ್ಲಿಯೇ ಮತ ಚಲಾಯಿಸಬಹುದಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.