ಉಡುಪಿ, ಏ.1: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, 3 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತವನ್ನಾಗಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ. ಕೆ ಹೇಳಿದರು. ಅವರು ಸೋಮವಾರ ನಗರದ ಪಶುವೈದ್ಯಕೀಯ ಪಾಲಿಕ್ಲಿನಿಕ್ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಲಾಖೆಯ ಹಾಗೂ ಕೆ.ಎಂ.ಎಫ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಖಾಸಗಿ ಲಸಿಕೆದಾರರು ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಗೆ ಆರ್ಥಿಕವಾಗಿ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪಶುಸಖಿಯವರು, ಗ್ರಾಮ ಪಂಚಾಯತ್, ಸಂಘ ಸಂಸ್ಥೆಗಳು ಮತ್ತು ಇತರ ಇಲಾಖೆಗಳ ಸಹಕಾರದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಲು ತಿಳಿಸಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಶುವೈದ್ಯ ಪಾಲಿಕ್ಲಿನಿಕ್‌ನ ಉಪ ನಿರ್ದೇಶಕರು (ಪ್ರಭಾರ) ಡಾ. ಚಂದ್ರಶೇಖರ ಸಾಲೀಮಠ, ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಯಮಿತ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂದೀಪ ಕುಮಾರ್, ಮುಖ್ಯ ಪಶುವೈದ್ಯಾಧಿಕಾರಿ ಡಾ. ವಾಗೀಶ್ ಚೌವಾಣ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಶಾಂತ್ ಕುಮಾರ್ ನಿರೂಪಿಸಿದರು.