ಉಡುಪಿ, ಏ.1: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ಚುನಾವಣಾ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ನೆನಪಿರಲಿ: ಮತದಾನದ ದಿನದಂದು ನೀಡಿರುವ ರಜೆಯನ್ನು ಪ್ರವಾಸಕ್ಕೆ ಹೋಗಿ ದುರುಪಯೋಗ ಪಡಿಸಿಕೊಳ್ಳುವ ಬದಲಿಗೆ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಲು ಬಳಸುವ ಮೂಲಕ ರಜೆಯನ್ನು ಸದುಪಯೋಗಪಡಿಸಿ.