ಉಡುಪಿ, ಏ.16: ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಏಪ್ರಿಲ್ 26 ಹಾಗೂ ಮೇ 7 ರಂದು ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಉತ್ತಮ ಅಭ್ಯರ್ಥಿಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು. ಇತ್ತೀಚಿನ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರದ ಪ್ರದೇಶದಲ್ಲಿ ವಾಸಿಸುತ್ತಿರುವವರ ಮತದಾನ ಮಾಡುವ ಪ್ರಮಾಣ ಕಡಿಮೆ ಇದೆ ಎಂದ ಅವರು, ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಕಡಿಮೆ ಮತದಾನ ಆಗಿರುವ ಕಾರಣ ಗುರುತಿಸುವುದರೊಂದಿಗೆ, ಮತದಾನ ಪ್ರಮಾಣ ಹೆಚ್ಚಿಸಲು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು ಎಂದರು.
ಸಾಮಾಜಿಕ ಜಾಲತಾಣ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಮತದಾನದ ಕುರಿತು ಸಂದೇಶವನ್ನು ಪಸರಿಸುವ ಮೂಲಕ ಜನರಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಬೇಕು. ಉಡುಪಿ ನಗರದಲ್ಲಿ ಚುನಾವಣೆಗೂ ಮೂರು-ನಾಲ್ಕು ದಿನಗಳ ಮುಂಚೆ ಜನಸಾಮಾನ್ಯರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಬೃಹತ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚನೆ ನೀಡಿದರು. ಹಿರಿಯ ನಾಗರೀಕರಿಗೆ, ವಿಕಲಚೇತನರಿಗೆ ಹಾಗೂ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರ‍್ಯಾಂಪ್ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದರು. ಇದೇ ಸಂದರ್ಭದಲ್ಲಿ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.