ಉಡುಪಿ, ಏ.30: ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರೆಡ್‌ಕ್ರಾಸ್ ಅಂಗ ಸಂಸ್ಥೆಯಾದ ಯುವ ರೆಡ್‌ಕ್ರಾಸ್ ಘಟಕವನ್ನು ಸ್ಥಾಪಿಸುವುದರೊಂದಿಗೆ ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ರಕ್ತನಿಧಿ ಕೇಂದ್ರ ಕುಂದಾಪುರ ತಾಲೂಕು ಹಾಗೂ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯುವರೆಡ್‌ಕ್ರಾಸ್ ಮತ್ತು
ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ರೆಡ್‌ಕ್ರಾಸ್ ಮೂಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಹಾಗೂ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸಬೇಕು ಎಂದರು. ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ ಎಕ್ಕಾರು, ಯುವರೆಡ್ ಕ್ರಾಸ್ ಘಟಕಗಳನ್ನು ಕಾಲೇಜುಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್ ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಕುಂದಾಪುರ ರಕ್ತನಿಧಿ ಕೇಂದ್ರದ ಸಭಾಪತಿ ಎಸ್ ಜಯಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದಾಧಿಕಾರಿ ಡಾ. ವೀಣಾ ಕುಮಾರಿ ಎಮ್, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಅಧ್ಯಕ್ಷ ಲಯನ್ ಅನಂತ್ ಶೆಟ್ಟಿ, ಬ್ರಹ್ಮಗಿರಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಗೀತಾ ವಾದಿರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.