ಉಡುಪಿ, ಮೇ 16: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ ವಾರ್ಷಿಕ ಕ್ರೀಡಾಕೂಟ ನಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಪರಮೇಶ್ವರ ಹೆಗಡೆ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ನಮ್ಮ ದೇಹ ಮತ್ತು ಮನಸ್ಸು ಎರಡನ್ನೂ ಕ್ರಿಯಾಶೀಲಗೊಳಿಸುತ್ತದೆ. ವಿದ್ಯಾರ್ಥಿಗಳು ಶಿಸ್ತು ಮತ್ತು ಸ್ಪೂರ್ತಿಯಿಂದ ಕ್ರೀಡಾಕೂಟದಲ್ಲಿ ತೊಡಗಿಸಿಕೊಳ್ಳುವಂತೆ ಕರೆಯಿತ್ತರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕ್ರೀಡೆಯಲ್ಲಿ ಕ್ರಿಯಾಶೀಲರಾಗುವುದು ಯುವಜನತೆಗೆ ಸಕಾರಾತ್ಮಕ ನಡತೆಯನ್ನು ಬೆಳೆಸಿಕೊಳ್ಳಲು ಸಹಕಾರಿ ಎಂದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ನಿತ್ಯಾನಂದ ವಿ. ಗಾಂವ್ಕರ್ ಹಾಗೂ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕ್ರೀಡಾಕೂಟ ಆಯೋಜಿಸಿದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ರಾಜಕೀಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಆದಿತ್ಯ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕೊಲಂಬೋದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಮ್ಯಾರಥಾನ್‌ನಲ್ಲಿ ಬಂಗಾರ ಗೆದ್ದ ಕಾಲೇಜಿನ ಕಛೇರಿ ಸಹಾಯಕ ಸುರೇಶ್ ಕರ್ಕೇರಾ ಇವರನ್ನು ಸನ್ಮಾನಿಸಲಾಯಿತು.