ಬಾರಕೂರು, ಜೂ.19: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ವತಿಯಿಂದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಮೊದಲ ಬಾರಿಗೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಒಳಗೊಂಡ ವಿಭಿನ್ನ ರೀತಿಯ ಒಂದು ದಿನದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ಜೂನ್ 16 ರಂದು ಕಾಲೇಜಿನ ಮೈದಾನದಲ್ಲಿ ನಡೆಯಿತು. ಉದ್ಯಮಿ ಗುರುಪ್ರಸಾದ್ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡುತ್ತಾ, ಈ ರೀತಿಯ ವಿಭಿನ್ನ ಕ್ರೀಡಾಕೂಟವು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಆರೋಗ್ಯಕರ ಉತ್ತಮ ಬಾಂಧವ್ಯವನ್ನು ವೃದ್ಧಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಸಂಯೋಜಕರಾದ ರಾಧಾಕೃಷ್ಣ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಆರೋಗ್ಯ ರಕ್ಷಣೆಯಲ್ಲಿ ಕ್ರೀಡೆಯ ಮಹತ್ವ ಮತ್ತು ಈ ಕ್ರೀಡಾಕೂಟದ ಉದ್ದೇಶದ ಬಗ್ಗೆ ಬೆಳಕು ಚೆಲ್ಲಿದರು. ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ವಿಭಿನ್ನ ಮಾದರಿಯ ಕ್ರಿಕೆಟ್ ಪಂದ್ಯವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ. ಇಂತಹ ಪಂದ್ಯಾಕೂಟಗಳು ಶೈಕ್ಷಣಿಕ ಸಂಸ್ಥೆಗಳ ನಡುವಿನ ಬಾಂಧವ್ಯವನ್ನು ವೃದ್ಧಿಸುವುದು ಮಾತ್ರವಲ್ಲದೇ ಸೌಹಾರ್ದಯುತ ವಾತಾವರಣ ನಿರ್ಮಿಸಲು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಡಾ. ಮಧು ಏನ್. ಎಂ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರಾದ ಆಶಿಶ್ ಶೆಟ್ಟಿ, ಗುಣಪ್ರಿಯ ಉಪಸ್ಥಿತರಿದ್ದರು.
ವಿವಿಧ ಕಾಲೇಜಿನ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಮತ್ತು ದ್ವಿತೀಯ ಬಹುಮಾನವನ್ನು ಎಸ್ಎಂಎಸ್ ಪ್ರಥಮ ದರ್ಜೆ ಕಾಲೇಜು ಬ್ರಹ್ಮಾವರ ಮುಡಿಗೇರಿಸಿಕೊಂಡರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿಶ್ವ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಪಡೆದರು. ಎಸ್ಎಂಎಸ್ ಕಾಲೇಜಿನ ಸೂರಜ್ ಬೇಲೂರು ಬೆಸ್ಟ್ ಬ್ಯಾಟ್ಸ್ ಮ್ಯಾನ್ ಮತ್ತು ಇಮ್ರಾನ್ ಪ್ಲೇಯರ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿಯನ್ನು ಪಡೆದುಕೊಂಡರು.