ಉಡುಪಿ: ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಚುನಾವಣೆಯಲ್ಲಿ ಜನತೆ ವಿರೋಧ ಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ, ಅಭಿವೃದ್ಧಿ ಮತ್ತು ಹಿಂದುತ್ವದ ಪರ ಜನಾದೇಶವನ್ನು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 7 ವರ್ಷಗಳ ಅಭಿವೃದ್ಧಿ ಪರ ಆಡಳಿತ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ರವರ ಜನಪರ ಆಡಳಿತ ವೈಖರಿಯನ್ನು ಮೆಚ್ಚಿ ಜನತೆ ಬಿಜೆಪಿಗೆ ಆಶೀರ್ವದಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ಬಿಜೆಪಿ ಸರಕಾರ ರಚಿಸಲಿದ್ದು, ಮಗದೊಮ್ಮೆ ದೇಶಾದ್ಯಂತ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಲಿದೆ ಎಂದರು.
ಇತ್ತೀಚೆಗೆ ಯುದ್ಧ ಪೀಡಿತ ದೇಶ ಉಕ್ರೇನ್ ನಿಂದ ಸಾವಿರಾರು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವಲ್ಲಿ ಪ್ರಧಾನಿ ಮೋದಿಯವರ ಪಾತ್ರ ಹಾಗೂ ಸಂಬಂಧಪಟ್ಟ ದೇಶಗಳು ಸಕಾರಾತ್ಮಕವಾಗಿ ಸ್ಪಂದಿಸಿದ ರೀತಿ ವಿಶ್ವ ಮಟ್ಟದಲ್ಲಿ ಭಾರತ ಮತ್ತು ಪ್ರಧಾನಿಯ ವಿಶ್ವ ನಾಯಕತ್ವಕ್ಕೆ ಸಾಕ್ಷಿಯಾಗಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಯಶಸ್ವಿ ಆಡಳಿತವೂ ಚುನಾವಣಾ ಫಲಿತಾಂಶಕ್ಕೆ ಪೂರಕವಾಗಿದೆ. ಪಂಚರಾಜ್ಯ ಚುನಾವಣಾ ಫಲಿತಾಂಶವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಅಭಿವೃದ್ಧಿ ಪರ ಸರಕಾರವನ್ನು ರಚಿಸಲಿದೆ ಎಂದು ಕುಯಿಲಾಡಿ ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರು ಹಾಗೂ ಜಿಲ್ಲಾ ಮೋರ್ಚಾ ಮಂಡಲ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.