ಉಡುಪಿ, ಆ.28: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.
ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.