ಉಡುಪಿ, ಸೆ.6: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯದ ವತಿಯಿಂದ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಸ್ವಭಾವ ಸ್ವಚ್ಛತಾ, ಸಂಸ್ಕಾರ
ಸ್ವಚ್ಛತಾ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ತಮ್ಮ ಸುತ್ತ-ಮುತ್ತಲಿನ ಪ್ರದೇಶಗಳ ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡುವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಜನಪ್ರತಿನಿಧಿಗಳನ್ನು ಸೇರಿಸಿ ಬೀಚ್ ಡ್ರೈವ್ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಜಿಲ್ಲೆಯ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರವಾಸಿ ತಾಣ, ರಾಷ್ಟ್ರೀಯ ಹೆದ್ದಾರಿಗಳ ಬದಿಗಳಲ್ಲಿ, ನೀರಿನ ಮೂಲಗಳು, ಮಾರುಕಟ್ಟೆ ಪ್ರದೇಶ, ಧಾರ್ಮಿಕ ಕೇಂದ್ರ, ಘನ ತ್ಯಾಜ್ಯ ನಿರ್ವಹಣಾ ಘಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಶ್ರಮದಾನ ಚಟುವಟಿಕೆಗಳನ್ನು ಆಯೋಜಿಸುವುದರೊಂದಿಗೆ ಎಲ್ಲಾ ತಾಲೂಕಿನ ಗ್ರಾಮ ಪಂಚಾಯತ್‌ಗಳು ಗ್ರಾಮಗಳ ಸ್ವಚ್ಚತೆಗಾಗಿ ಸ್ವಯಂ ಪ್ರೇರಿತವಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಜ್ಞಾ ವಿಧಿ, ಮಾನವ ಸರಪಳಿ, ಗಿಡ ನೆಡುವುದು, ಅರಿವು ಕಾರ್ಯಾಗಾರ, ಜಾಥಾ ಆಯೋಜನೆ ಸೇರಿದಂತೆ ಮತ್ತಿತರ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕೈಜೋಡಿಸುವುದರೊಂದಿಗೆ ಸಮುದಾಯದ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದ ಅವರು ಕಾರ್ಯಕ್ರಮ ಆಯೋಜನೆ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದರು. ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳ ಶೌಚಾಲಯಗಳು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತ್ ಹಾಗೂ ನಗರಸಭೆಗಳು ತಮ್ಮ ಸಂಪನ್ಮೂಲಗಳನ್ನು ಬಳಸಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಬಳಕೆಗೆ ಮೂಲಭೂತ ಸೌಕರ್ಯಗಳೊಂದಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಫಾಯಿ ಮಿತ್ರ ಸುರಕ್ಷಾ ಶಿವಿರ ಮೂಲಕ ಜಿಲ್ಲೆಯ ನೈರ್ಮಲ್ಯ ಕಾರ್ಯಕರ್ತರುಗಳಿಗೆ ಉಚಿತ ಆರೋಗ್ಯ ತಪಾಸಣೆ, ಅಗತ್ಯ ವ್ಯಾಕ್ಸಿನೇಷನ್, ಔದ್ಯೋಗಿಕ ಅಪಾಯಗಳಿಂದ ರಕ್ಷಿಸಲು ಆಯ್ದ ಕಾರ್ಮಿಕರುಗಳಿಗೆ ಪಿ.ಪಿ.ಇ ಕಿಟ್, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮತ್ತು ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ.ಓ ಗಳು, ಪಿ.ಡಿ.ಒ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.