ಉಡುಪಿ: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ 266 ಶಾಲೆಗಳ 7229 ಬಾಲಕರು 6793
ಬಾಲಕಿಯರು ಸೇರಿದಂತೆ ಒಟ್ಟು 14022 ಜನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದು, ಅವರಲ್ಲಿ 13672 ಹೊಸದಾಗಿ, 298 ಜನ ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಕಳೆದ ಬಾರಿ ಅನುತ್ತೀರ್ಣರಾದವರೂ ಸೇರಿದ್ದು, ಜಿಲ್ಲೆಯ 58 ಕೇಂದ್ರಗಳಲ್ಲಿ ಬರೆಯಲಿದ್ದಾರೆ.
ಈ ಬಾರಿ ಉಡುಪಿ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆಯಬೇಕು. ಪರೀಕ್ಷಾ ಕೇಂದ್ರಕ್ಕೆ ಯಾವುದೇ ವಿದ್ಯಾರ್ಥಿಯೂ ಗೈರು
ಹಾಜರಾಗದಂತೆ ಎಚ್ಚರ ವಹಿಸಬೇಕು ಎಂದ ಅವರು,
ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ
ಗಳನ್ನು ಅಳವಡಿಸಬೇಕು, ಅವುಗಳ ಕಾರ್ಯನಿರ್ವಹಣೆಯು ಉತ್ತಮವಾಗಿದೆ ಎಂಬ ಬಗ್ಗೆ ಪರಿಶೀಲಿಸಿ 2 ದಿನ
ಮುಂಚಿತವಾಗಿ ವರದಿ ನೀಡಬೇಕೆಂದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನಿಗಧಿತ ಕಾಲಕ್ಕೆ ಸರಿಯಾಗಿ ತಲುಪುವ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಿರುವ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವ ಜೊತೆಯಲ್ಲಿ ಹೆಚ್ಚುವರಿ ಸಿಬ್ಬಂದಿಗಳು ಇರುವಂತೆ ನೋಡಿಕೊಳ್ಳಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರದ ಸೂಚನೆಯನ್ವಯ ಕೋವಿಡ್19 ರ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಈ ಕಾರ್ಯಕ್ಕೆ ಅಗತ್ಯವಿರುವ ಇತರೆ ಇಲಾಖೆಗಳ ಸಹಕಾರವನ್ನು ಪಡೆಯಬೇಕು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಪರೀಕ್ಷಾ ಕೇಂದ್ರದಲ್ಲಿ
ನಿಯೋಜಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ
ಸೆಕ್ಷನ್ 144 ನ್ನು ಜಾರಿಗೊಳಿಸಲಾಗುವುದು. ಪರೀಕ್ಷಾ
ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿಗಳನ್ನು
ಕಡ್ಡಾಯವಾಗಿ ಮುಚ್ಚಲು ಸಹ ಆದೇಶಿಸಲಾಗುವುದು ಎಂದ
ಅವರು, ಪರೀಕ್ಷಾ ಕೇಂದ್ರದ ಒಳಗೆ ಯಾರೊಬ್ಬರೂ ಮೊಬೈಲ್, ಕ್ಯಾಮರಾ ಗಳನ್ನು ಕೊಂಡೊಯ್ಯುವುದು
ಮತ್ತು ಬಳಕೆ ಮಾಡುವುದು ಕಡ್ಡಾಯವಾಗಿ
ನಿಷೇಧಿಸಲಾಗಿದೆ ಎಂದರು.
ಜಿ.ಪಂ. ಸಿಇಓ ಡಾ. ನವೀನ್ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಲಭ್ಯವಾಗುವುವಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ
ನೀಡಿದರು.
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಸುಗಮ ಹಾಗೂ ಪಾರದರ್ಶಕ ಪರೀಕ್ಷೆಯನ್ನು ನಡೆಸಲು ನೀಡಿರುವ
ಮಾರ್ಗಸೂಚಿಗಳನ್ನು ಪಾಲಿಸಿ, ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.
ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿಡಲು ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಡಿಡಿಪಿಐ ಗೋವಿಂದ ಮಡಿವಾಳ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಜಿಲ್ಲಾ ಖಜಾನಾಧಿಕಾರಿ ಗೋಪಾಲಕೃಷ್ಣ, ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಜರಿದ್ದರು.