ಮಣಿಪಾಲ, ಅ.10: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗದ ವತಿಯಿಂದ ನಡೆಯುವ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಅಕ್ಟೋಬರ್ 9 ರಂದು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ, ವಿದ್ಯಾರ್ಥಿಗಳ ಕ್ರೀಡಾ ಬೆಳವಣಿಗೆಯಲ್ಲಿ ಇಲಾಖೆಯು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದೆ, ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಸಲು ಎಲ್ಲಾ ಪ್ರಾಂಶುಪಾಲರುಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಕೈಜೋಡಿಸಬೇಕು ಎಂದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಮಾತನಾಡಿ, ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟದ ಜವಾಬ್ದಾರಿಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘವು ವಹಿಸಿಕೊಳ್ಳಲಿದೆ ಎಂದರು.
ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟವು ಅಕ್ಟೋಬರ್ ತಿಂಗಳ 29 ಮತ್ತು 30ರಂದು ಉಡುಪಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡಿನಲ್ಲಿ ನಡೆಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿಯಾದ ದಿನೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್, ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್‌ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಸತೀಶ್ ಹೆಗ್ಡೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ಐವನ್ ದೊನಾತ್ ಡಿಸೋಜ, ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಸರ್ವಸದಸ್ಯರು ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಶಮಿತ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ವಂದಿಸಿದರು.