ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಕಾರ ಕೋರಿ ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಮಂಗಳವಾರ ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರಾದ ಪಿ.ಆರ್.ಗುರುರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮಂಗನಕಾಯಿಲೆ, ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ನ್ಯುಮೋನಿಯಾ ತಡೆಗಟ್ಟುವಿಕೆ, ನವಜಾತ ಶಿಶು ಸಪ್ತಾಹ, ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಆಶಾ ಕುಂದುಕೊರತೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯದಲ್ಲಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ತಲುಪಿಸಲು ತಹಶೀಲ್ದಾರರು ಸೂಚಿಸಿದರು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿಯವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಸ್ವಾಗತಿಸಿ, ಕ್ಷೇತ್ರ ಆರೊಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ತೆರೆಸಾ ಎಂ, ವಂದಿಸಿದರು.