Saturday, November 23, 2024
Saturday, November 23, 2024

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

Date:

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಮಲೆನಾಡು ಭಾಗದಲ್ಲಿ ಕ್ಯಾಸನೂರು ಅರಣ್ಯ ರೋಗವು ಹಲವು ವರ್ಷಗಳಿಂದ ಕಂಡು ಬರುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ಕಾಡಂಚಿನ ಪ್ರದೇಶಗಳಲ್ಲಿ ಈ ಹಿಂದೆ ಆಗಿರುವುದು ಕಂಡು ಬಂದಿದೆ. ಆದರೆ ಪ್ರಸ್ತುತ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದರು. ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ವರೆಗೆ ಈ ಕಾಯಿಲೆ ಬರುತ್ತದೆ. ಸಾಮಾನ್ಯವಾಗಿ ಜನರು ಉರುವಲುಗಳನ್ನು ತರಲು ಕಾಡಿಗೆ ಹೋಗಿ ಬಂದಾಗ ಅಥವಾ ಜಾನುವಾರುಗಳು ಕಾಡಿನಲ್ಲಿ ಮೇಯಲು ಹೋದಾಗ ಉಣ್ಣೆಗಳು ಅವುಗಳ ಜೊತೆಯಲ್ಲಿ ಬಂದು ಮನುಷ್ಯನಿಗೆ ಕಚ್ಚಿದಾಗ ಈ ಕಾಯಿಲೆ ಬರುತ್ತದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದರು.

ಮಂಗ ಸತ್ತ ಜಾಗವನ್ನು ಹಾಟ್ಸಾಟ್ ಎಂದು ಗುರುತಿಸಿ, ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜ್ವರ ಇರುವ ಕುರಿತು ಸರ್ವೇ ನಡೆಸಲಾಗುವುದು ಎಂದ ಅವರು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಆರೋಗ್ಯ ಸಮಿತಿಯ ಸಭೆಗಳನ್ನು ನಡೆಸಿ ಸ್ಥಳೀಯ ಜನರಿಗೆ ಆರೋಗ್ಯ ಸುಧಾರಣೆ ಬಗ್ಗೆ ಸ್ಥಳೀಯವಾಗಿ ಪ್ರಚಾರ ಕೈಗೊಳ್ಳಬೇಕು ಹಾಗೂ ಹೊರಗಿನಿಂದ ಬಂದ ಪ್ರವಾಸಿಗರಿಗೂ ಸಹ ಸೂಕ್ತ ಮಾಹಿತಿಗಳನ್ನು ಒದಗಿಸಬೇಕು ಎಂದರು. ಈ ರೋಗಗಳ ಕುರಿತು ಮುಂಜಾಗೃತವಾಗಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯಬೇಕು. ಅರಣ್ಯ ಪ್ರದೇಶ ಸುತ್ತಮುತ್ತ ವಾಸಿಸುವ ಜನರಿಗೆ ಈ ಕಾಯಿಲೆ ಬರುವ ಅಪಾಯ ಹೆಚ್ಚಿರುವುದರಿಂದ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಂಗನ ಜ್ವರ ಬಂದರೆ ಮೂರರಿಂದ ಐದು ದಿನಗಳ ಕಾಲ ತೀವ್ರ ತರಹದ ಜ್ವರ, ತೀವ್ರ ದೇಹನೋವು, ಕಣ್ಣು ಕೆಂಪಾಗುವುದು, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಕಂಡುಬರುತ್ತವೆ ಎಂದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಿನಲ್ಲಿ ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ತಮ್ಮ ಆರೋಗ್ಯದ ಬಗ್ಗೆಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನರಿಗೆ ಅರಿವು ಮೂಡಿಸಲು ಹೆದ್ದಾರಿ ಫಲಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚು ಆಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ನಾಯಿ ಕಚ್ಚಿದವರಿಗೆ ಹಾಗೂ ಹಾವು ಕಚ್ಚಿದ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಲಸಿಕೆಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!