ಮಲ್ಪೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಶಕ್ತಿ ಬೆಳೆಸುವಲ್ಲಿ ವಿದ್ಯಾರ್ಥಿ ಸಂಘಗಳ ಪಾತ್ರ ಮಹತ್ವವಾದುದು. ರಾಜಕೀಯ ಪ್ರಜ್ಞೆಯೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ರೂಢಿಸುವಲ್ಲಿ ವಿದ್ಯಾರ್ಥಿ ಸಂಘಗಳು ಶ್ರಮಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾಲೇಜಿನ ಪಠ್ಯ ಮತ್ತು ಪಠ್ಯ ಪೂರಕ ಚಟುವಟಿಕೆಗಳನ್ನು ಪ್ರಶಂಶಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವೇದಿಕೆಯ ಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿದರು.
ವಿದ್ವಾಂಸರಾದ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ವಿಶೇಷ ಉಪನ್ಯಾಸ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಜಾಂಚಿ ದಯಾನಂದ ಶೆಟ್ಟಿ ಕೊಜಕುಳಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿ ವೇದಿಕೆಯ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ದುಗ್ಗಪ್ಪ ಕಜೆಕಾರ್ ಸ್ವಾಗತಿಸಿದರು.
ಪದವಿ ವಿಭಾಗದ ಸಂಚಾಲಕ ಪ್ರೊ. ರಾಧಾಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಪ್ರೊ. ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.