Friday, January 24, 2025
Friday, January 24, 2025

ಉದ್ದಿಮೆದಾರರು ಜಿಲ್ಲೆಯಲ್ಲಿ ಕಿರು ಉದ್ಯಮಗಳ ಸ್ಥಾಪನೆಗೆ ಮುಂದಾಗಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉದ್ದಿಮೆದಾರರು ಜಿಲ್ಲೆಯಲ್ಲಿ ಕಿರು ಉದ್ಯಮಗಳ ಸ್ಥಾಪನೆಗೆ ಮುಂದಾಗಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Date:

ಉಡುಪಿ, ಡಿ.23: ರೈತರನ್ನು ಉದ್ಯಮಿಗಳನ್ನಾಗಿ ಮಾಡಿ, ಅವರ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಸಂಸ್ಕರಿಸಿ, ದೇಶ ಮತ್ತು ವಿದೇಶಗಳಿಗೆ ದೇಶೀಯ ಉತ್ಪನ್ನಗಳನ್ನು ರಪ್ತು ಮಾಡುವ ಮೂಲಕ ವಿದೇಶಗಳಿಗೆ ಪರಿಚಯಿಸುವ ಉದ್ಧೇಶ ಹೊಂದಿದ್ದು, ಇದಕ್ಕಾಗಿ ಕಿರು ಉದ್ಯಮಗಳನ್ನು ಸ್ಥಾಪಿಸಲು ಜಿಲ್ಲೆಯ ಉದ್ದಿಮೆದಾರರು ಮುಂದೆ ಬರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಮಾಹಿತಿ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಆಹಾರ ಸಂಸ್ಕರಣಾ ಉದ್ದಿಮೆ ಬಲಪಡಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವುದರೊಂದಿಗೆ ಜಿಲ್ಲೆಯ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ನಿರುದ್ಯೋಗ ನಿವಾರಣೆ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ನೈಜವಾಗಿ ಶ್ರಮ ವಹಿಸಿ ದುಡಿಯುವವರಿಗೆ ಈ ಯೋಜನೆಯು ಶಕ್ತಿಯಾಗಲಿದೆ. ಜಿಲ್ಲೆಯಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಉದ್ದಿಮೆದಾರರಿಗೆ ಅರ್ಜಿ ಮಂಜೂರಾಗಿದೆ. ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಸಹಾಯಧನವನ್ನು ಪಡೆಯಲು ಸರ್ಕಾರದ ಯಾವುದೇ ಇಲಾಖೆಗಳಿಗೆ ಅರ್ಜಿ ಹಾಕಿ ಅಲೆದಾಡುವ ಅವಶ್ಯಕತೆ ಇರುವುದಿಲ್ಲ. ಇದಕ್ಕಾಗಿಯೇ ಜಿಲ್ಲಾ ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಲಾಗಿದ್ದು, ಅವರುಗಳು ಬ್ಯಾಂಕ್‌ನಿಂದ ಸಾಲ ದೊರಕುವಂತೆ ಮಾಡುವುದರೊಂದಿಗೆ ಸಹಾಯಧನ ಲಭಿಸುವವರೆಗೂ ಸಹಕಾರ ನೀಡಲಿದ್ದಾರೆ ಎಂದರು. ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ರೈತ ನಮ್ಮ ದೇಶದ ಬೆನ್ನೆಲುಬು. ರೈತರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಪರಿಣಾಮಕಾರಿ ಅನುಷ್ಠಾನ ಮಾಡಿದಾಗ ಮಾತ್ರ ನಿಗದಿತ ಗುರಿ ಸಾಧಿಸುವುದರೊಂದಿಗೆ ಯೋಜನೆಗಳು ಯಶಸ್ವಿಗೊಳಿಸಲು ಸಾಧ್ಯವಾಗುತ್ತದೆ ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ವಾತಾವರಣದ ಪ್ರತಿಕೂಲ ಪರಿಸ್ಥಿತಿ ಸೇರಿದಂತೆ ಅನೇಕ ಸವಾಲುಗಳನ್ನು ಎದುರಿಸಿ ರೈತರು ಬೆಳೆದ ಬೆಳೆಗಳಿಗೆ ಮೌಲ್ಯವನ್ನು ಹೆಚ್ಚಿಸುವುದರೊಂದಿಗೆ ಅವರುಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಸರಕಾರ ಹಾಗೂ ಇಲಾಖೆಯ ಜವಾಬ್ದಾರಿಯಾಗಿದೆ ಎಂದರು. ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಹೆಚ್.ಕೆ ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅರ್ಹ ಫಲಾನುಭವಿಗಳಿಗೆ ಕೃಷಿ ಉಪಕರಣ, ತುಂತುರು ನೀರಾವರಿ ಘಟಕದ ಮಂಜೂರಾತ್ರಿ ಪತ್ರ, ಪಿ.ಎಂ.ಎಫ್.ಎಂ.ಇ ಯೋಜನೆಯ ಸಾಲ ಮಂಜೂರಾತಿ ಪತ್ರ, ಮಣ್ಣು ಆರೋಗ್ಯ ಚೀಟಿ, ಸಮಗ್ರ ಕೃಷಿ ಪದ್ಧತಿ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಎಎಸ್‌ಪಿ ಪಿ.ಎ ಹೆಗಡೆ, ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸೀತಾರಾಮ, ಶೆಟ್ಟಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಅಂಜನಾದೇವಿ, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ರೈತರು, ರೈತ ಮಹಿಳೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ನಿರೂಪಿಸಿ, ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!